ಮಡಿಕೇರಿ, ಜ. 18: ವಿಧಾನಸಭಾ ಚುನಾವಣೆ ಹಿನ್ನೆಲೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವ ಸಂಬಂಧ ತಹಶೀಲ್ದಾರರು ಮತ್ತು ವಿವಿಧ ಹಂತದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಚುನಾವಣಾ ಆಯೋಗದ ನಿರ್ದೇಶನವನ್ನು ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಚಾಚು ತಪ್ಪದೇ ಪಾಲಿಸಬೇಕು. ಯಾವದೇ ರೀತಿಯ ಲೋಪಗಳು ಕಂಡುಬರದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧಿಸಿದಂತೆ ತಾ. 22 ರವರೆಗೆ ಅವಕಾಶವಿದ್ದು, ಈ ಸಂಬಂಧ ಜಾಗೃತಿ ಮೂಡಿಸಬೇಕಾಗಿದೆ. ತಾಲೂಕು ಮಟ್ಟದಲ್ಲಿ ತಹಶೀಲ್ದಾರರು, ಬೂತ್ ಮಟ್ಟದ ಅಧಿಕಾರಿಗಳು ಮತ್ತು ಮೇಲ್ವಿಚಾರಕರು ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾಹಿತಿ ನೀಡಬೇಕು. ನಮೂನೆ 6,7, 8 ಮತ್ತು 8ಎ ಯನ್ನು ಪರಿಷ್ಕರಣೆ ಮಾಡಬೇಕು. ಹಾಗೆಯೇ ಇಆರ್‍ಎಂಎಸ್‍ನಲ್ಲಿ ದಾಖಲೆ ಎಂಟ್ರಿ ಮಾಡಿ ಇತ್ಯರ್ಥ ಮಾಡಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಇದ್ದು, ಭಾವಚಿತ್ರವಿಲ್ಲದೆ ಇರುವ ಮತದಾರರಿಂದ ಭಾವಚಿತ್ರ ಪಡೆದು ಡಾಟಾ ಎಂಟ್ರಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಮತಗಟ್ಟೆ ಕೇಂದ್ರಗಳಲ್ಲಿ ರ್ಯಾಂಪ್ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಶೌಚಾಲಯ, ಕುಡಿಯುವ ನೀರು, ಪೀಠೋಪಕರಣ, ಶೆಲ್ಟರ್ ಮತ್ತಿತರ ಅಗತ್ಯ ಮೂಲ ಸೌಲಭ್ಯಗಳು ಇವೆಯೇ ಎಂಬದನ್ನು ಪರಿಶೀಲಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಗ್ರಾಮೀಣ ಮತ್ತು ನಗರದ ಪ್ರದೇಶದ ಮತಗಟ್ಟೆ ಗುರುತಿಸುವದು, ಪರ್ಯಾಯ ಮತಗಟ್ಟೆ ಗುರುತಿಸುವದು, ಮತಗಟ್ಟೆ ಪುನರ್ ವಿಂಗಡಣೆ, ನಂತರ ಹೊಸದಾಗಿ ಸ್ಥಾಪಿಸಿರುವ ಮತಗಟ್ಟೆಗಳ ಬಗ್ಗೆ ಮತದಾರರಿಗೆ ಮಾಹಿತಿ ನೀಡುವದು, ಮತಗಟ್ಟೆ ಬದಲಾವಣೆ ಇದ್ದಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ವಿದ್ಯುನ್ಮಾನ ಮತಯಂತ್ರ ಮತ್ತು ವಿವಿಪ್ಯಾಟ್ ದಾಸ್ತನು ಮಾಡಲು ಸ್ಥಳ ಗುರುತಿಸುವದು ಹಾಗೂ ಇವಿಎಂ ಮತ್ತು ವಿವಿಪ್ಯಾಟ್ ಕಾರ್ಯನಿರ್ವಹಣೆ ಬಗ್ಗೆ ರಾಜಕೀಯ ಪಕ್ಷದ ಮುಖಂಡರಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು. ಚುನಾವಣೆಗೆ ಅವಶ್ಯವಿರುವ ವಾಹನಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳುವದು. ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಸಂಬಂಧ ಸ್ಥಳ ಗುರುತಿಸುವದು. ಮತಗಟ್ಟೆಗಳ ವಿವರ ಸಂಗ್ರಹಿಸುವದು ಮತ್ತಿತರ ಕಾರ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜಿ.ಪಂ. ಸಿಇಓ ಪ್ರಶಾಂತ್ ಕುಮಾರ್ ಮಿಶ್ರ ಮಾತನಾಡಿ, ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವದಡಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕಿದೆ. ಈಗಾಗಲೇ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಚುನಾವಣಾ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಚುನಾವಣಾ ಅಧಿಕಾರಿಗಳು ಮತ್ತು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಬೇಕಿದೆ ಎಂದು ಮಾಹಿತಿ ನೀಡಿದರು.
ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಮಾತನಾಡಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರ್ತಿಸುವದು, ಚುನಾವಣೆ ಹಿನ್ನೆಲೆ ಅಗತ್ಯ ಬಂದೋಬಸ್ತ್ ಮಾಡುವದು ಮತ್ತಿತರ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ. ಜಗನಾಥ್ ಹಲವು ಮಾಹಿತಿ ನೀಡಿದರು. ತಹಶೀಲ್ದಾರ್ ಕುಸುಮ ಮಹೇಶ್, ಗೋವಿಂದರಾಜು, ಪ್ರವೀಣ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಭಾಗ್ಯ, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್, ಶಿರಸ್ತೆದಾರರಾದ ಪ್ರಕಾಶ್, ಅನಿಲ್ ಕುಮಾರ್ ಇತರರು ಇದ್ದರು.