ಮಡಿಕೇರಿ, ಜ. 19 : ಕೇಂದ್ರ ಸರ್ಕಾರದ ಸಾಧನೆ ಮತ್ತು ರಾಜ್ಯ ಸರ್ಕಾರದ ವೈಫಲ್ಯತೆಯನ್ನು ಜನರೆದುರು ತೆರೆದಿಡುವ ಬಿಜೆಪಿಯ ಪರಿವರ್ತನಾ ಯಾತ್ರೆ ತಾ. 24 ರಂದು ಮಡಿಕೇರಿಗೆ ಆಗಮಿಸಲಿದ್ದು, ನಗರದ ಗಾಂಧಿ ಮೈದಾನದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ.24 ರಂದು ಬೆಳಗ್ಗೆ 10.30ಕ್ಕೆ ನಗರದ ಶ್ರೀ ಚೌಡೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸುವ ಮೂಲಕ ಪರಿವರ್ತನಾ ರ್ಯಾಲಿಗೆ ಚಾಲನೆ ನೀಡಲಾಗುವದು. ಜಿಲ್ಲೆಯ ಎಲ್ಲಾ ಭಾಗಗಳಿಂದ ಕಾರ್ಯಕರ್ತರು ದ್ವಿಚಕ್ರ ವಾಹನದಲ್ಲಿ ಆಗಮಿಸಿ ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಬೆಳಿಗ್ಗೆ 11 ಗಂಟೆಗೆ ಗಾಂಧಿ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮುಖಂಡರಾದ ಕೆ.ಎಸ್.ಈಶ್ವರಪ್ಪ, ಶೋಭಾ ಕರಂದ್ಲಾಜೆ, ಸಿ.ಟಿ.ರವಿ, ಅರವಿಂದ ಲಿಂಬಾವಳಿ, ಅನಂತ ಕುಮಾರ್, ಡಿ.ವಿ.ಸದಾನಂದ ಗೌಡ, ಪ್ರತಾಪ ಸಿಂಹ, ನಳಿನ್ ಕುಮಾರ್ ಕಟಿಲ್, ಶಾಸಕದ್ವಯರಾದ ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಎಂಎಲ್‍ಸಿ ಸುನಿಲ್ ಸುಬ್ರಮಣಿ, ಸೇರಿದಂತೆ

(ಮೊದಲ ಪುಟದಿಂದ) ರಾಷ್ಟ್ರೀಯ ಪ್ರಮುಖರು, ರಾಜ್ಯ ಹಾಗೂ ಜಿಲ್ಲೆಯ ವಿವಿಧ ಘಟಕಗಳ ಪದಾಧಿಕಾರಿಗಳು, ಎಲ್ಲಾ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಪರಿವರ್ತನಾ ರ್ಯಾಲಿಯ ಕೊಡಗು ಉಸ್ತುವಾರಿ ಹೊಂದಿರುವ ಮಾಜಿ ಎಂಎಲ್‍ಸಿ ಎಸ್.ಜಿ.ಮೇದಪ್ಪ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪರಿವರ್ತನಾ ಯಾತ್ರೆ ನಡೆಸುತ್ತಿದ್ದು, ಮಡಿಕೇರಿಯಲ್ಲಿ ನಡೆಯುವ ಸಮಾವೇಶದಲ್ಲಿ 15 ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಇದರ ಆಧಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೈಲುಮಾರ್ಗ ಇಲ್ಲ

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಬಿನ್ ದೇವಯ್ಯ ಮಾತನಾಡಿ, ಕೊಡಗು ಜಿಲ್ಲೆಯ ಕುಶಾಲನಗರದವರೆಗೆ ಮಾತ್ರ ರೈಲು ಮಾರ್ಗ ಬರಲಿದ್ದು, ಇತರ ಭಾಗಗಳಿಗೆ ವಿಸ್ತರಣೆಗೊಳ್ಳುವದಿಲ್ಲವೆಂದು ಸ್ಪಷ್ಟಪಡಿಸಿದರು. ಸಂಸದ ಪ್ರತಾಪ ಸಿಂಹ ಅವರು ಕೊಡಗಿನ ಜನ ಆತಂಕ ಪಡುವ ಅಗತ್ಯವಿಲ್ಲವೆಂದು ತಿಳಿಸಿದ್ದು, ಅವರು ರೈಲ್ವೆ ಸಚಿವರೊಂದಿಗೆ ಸಂಪರ್ಕದಲ್ಲಿದ್ದಾರೆ. ರೈಲು ಮಾರ್ಗ ಕೇಂದ್ರದ ಯೋಜನೆಯಾಗಿದ್ದು, ಮಾರ್ಗವನ್ನು ಕುಶಾಲನಗರ ಪ್ರವೇಶಿಸಲು ಬಿಡುವದಿಲ್ಲವೆಂದು ಉಸ್ತುವಾರಿ ಸಚಿವರು ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಜಪ್ಪು ಅಚ್ಚಪ್ಪ ಮಾತನಾಡಿ, ಕೇರÀಳಕ್ಕೆ ಅನುಕೂಲ ಕಲ್ಪಿಸಲು ದಕ್ಷಿಣ ಕೊಡಗಿನ ಮೂಲಕ ರೈಲು ಮಾರ್ಗ ಹಾದು ಹೋಗುತ್ತದೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಶಾಂತೆಯಂಡ ರವಿ ಕುಶಾಲಪ್ಪ ಹಾಗೂ ನಾಪಂಡ ರವಿ ಕಾಳಪ್ಪ ಉಪಸ್ಥಿತರಿದ್ದರು.