ನಾಪೋಕ್ಲು, ಜ. 23: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಡಿಕೇರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಪಾಲಿಬೆಟ್ಟದ ಲೂಡ್ಸ್‍ಹಿಲ್ ಪ್ರೌಢಶಾಲೆಯ ತಂಡವು ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಗೊಂಡಿದೆ. ಸೋಮವಾರಪೇಟೆಯ ಸಂತ ಜೋಸೆಫರ ಪ್ರೌಢಶಾಲೆಯ ತಂಡವು ದ್ವಿತೀಯ ಸ್ಥಾನ ಪಡೆಯಿತು. ಮಡಿಕೇರಿಯ ಸಂತ ಜೋಸೆಫರ ಪ್ರೌಢಶಾಲೆಯ ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದರು.
ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದಲ್ಲಿ ಹೆಚ್ಚಿನ ಅಧ್ಯಯನ ಕೈಗೊಂಡು ಭವಿಷ್ಯದ ವಿಜ್ಞಾನಿಗಳಾಗಿ ರೂಪುಗೊಳ್ಳಬೇಕೆಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್.ಜಿ. ಭಾಗ್ಯ ಕರೆ ನೀಡಿದರು.
ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಪ್ರಶಸ್ತಿ ವಿತರಿಸಿದರು. ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಟಿ.ಜಿ. ಪ್ರೇಮ್ ಕುಮಾರ್ ಮಾತನಾಡಿದರು. ಕ್ವಿಜ್ ಮಾಸ್ಟರ್‍ಗಳಾದ ಸಿ.ಎಸ್. ಸುರೇಶ್ ಹಾಗೂ ಪಿ.ಆರ್. ಅಯ್ಯಪ್ಪ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಶಿಕ್ಷಣಾಧಿಕಾರಿ ಗೊಂಡೆಶೆಟ್ಟಿ, ನೋಡಲ್ ಅಧಿಕಾರಿ ಕಾತ್ಯಾಯಿನಿ ವಿಜ್ಞಾನ ವಿಷಯ ಪರಿವೀಕ್ಷಕ ಎಂ. ದೇವ ನಾಯಕ್ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಗುರುರಾಜ್, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ. ಶಿವರಾಂ, ಶಿಕ್ಷಣ ಸಂಯೋಜಕ ಚಂದ್ರಹಾಸ ಎಂ. ಗೌಡ ಮತ್ತಿತರರು ಇದ್ದರು.
ವಿಜ್ಞಾನ ಶಿಕ್ಷಕಿ ಎನ್.ಕೆ. ಮಾಲಾದೇವಿ ವಿಜ್ಞಾನಗೀತೆ ಹಾಡಿದರು. ಇದಕ್ಕೂ ಮುನ್ನ ನಡೆದ ವಿಜ್ಞಾನ ರಸಪ್ರಶ್ನೆ ಲಿಖಿತ ಪರೀಕ್ಷೆಯಲ್ಲಿ ಜಿಲ್ಲೆಯ 82 ಶಾಲೆಗಳಿಂದ ಒಟ್ಟು 164 ವಿದ್ಯಾರ್ಥಿಗಳು ಭಾಗವಹಿಸಿದ್ದರು.