*ಗೋಣಿಕೊಪ್ಪಲು, ಜ. 23: ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಶಿಕ್ಷಕರು ವಿಶೇಷ ಕಾಳಜಿ ವಹಿಸಬೇಕು. ಮುಂದಿನ ಪರೀಕ್ಷೆಯ ಫಲಿತಾಂಶದಲ್ಲಿ ಉತ್ತಮ ಅಂಕಗಳಿಸುವ ಗುರಿ ವಿದ್ಯಾರ್ಥಿಗಳೊಂದಿಗೆ ಶಿಕ್ಷಕರದೂ ಆಗಿರಬೇಕು ಎಂದು ಜಿ.ಪಂ. ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಮೂಕಂಡ ವಿಜು ಸುಬ್ರಮಣಿ ಅಭಿಪ್ರಾಯ ವ್ಯಕ್ತಪಡಿಸಿದರು.

ತಿತಿಮತಿ ಗಿರಿಜನ ವಿದ್ಯಾರ್ಥಿ ನಿಲಯ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಆಶ್ರಮ ಶಾಲೆಯ ಶಿಕ್ಷಕರ ಸಮನ್ವಯ ಸಭೆಯಲ್ಲಿ ಮಾತನಾಡಿದರು. ಶಿಕ್ಷಕರು ಸಮಯ ಪ್ರಜ್ಞೆ ಬೆಳೆಸಿಕೊಂಡು ಶಿಕ್ಷಣದಲ್ಲಿ ಪ್ರಗತಿ ಹೊಂದುವ ಮೂಲಕ ಮಾದರಿಯಾಗಬೇಕು ಎಂದರು.

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಮನ್ವಯ ಅಧಿಕಾರಿ ಪ್ರಕಾಶ್ ಮಾತನಾಡಿ, ಮಕ್ಕಳ ಭವಿಷ್ಯಕ್ಕೆ ಶಿಕ್ಷಕರ ಪಾತ್ರ ಬಹುಮುಖ್ಯವಾದದ್ದು. ಶಿಕ್ಷಕರು ತಮ್ಮ ಕರ್ತವ್ಯದ ಸಮಯವನ್ನು ಮಕ್ಕಳಿಗಾಗಿ ಸದುಪಯೋಗ ಪಡಿಸಿಕೊಂಡು ಸಂಜೆ 5ರ ತನಕ ಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಶಿಕ್ಷಣದಲ್ಲಿ ಸುಧಾರಣೆ ಕಂಡು ಕೊಳ್ಳಲು ಮಕ್ಕಳನ್ನು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೆರೇಪಿಸಿ ಅವರಲ್ಲಿನ ಸಾಮಥ್ರ್ಯಕ್ಕೆ ವೇದಿಕೆ ಕಲ್ಪಿಸಲು ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಚಂದ್ರಶೇಖರ್ ಮಾತನಾಡಿ, ತಮ್ಮ ಸಮಸ್ಯೆಗಳನ್ನು ತಮ್ಮ ಮನೆಯಲ್ಲಿಯೇ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ, ದೇಶಕ್ಕೆ ಉತ್ತಮ ಪ್ರಜೆಗಳನ್ನು ನೀಡುವ ದೊಡ್ದ ಜವಾಬ್ದಾರಿ ಶಿಕ್ಷಕರ ಹೆಗಲ ಮೇಲಿದೆ. ವಿದ್ಯಾರ್ಥಿಗಳ ಜೀವನ ರೂಪಿಸಲು ನಿಮ್ಮ ಜೀವನದ ಅಲ್ಪ ಸಮಯವನ್ನು ತ್ಯಾಗಮಾಡಿ ಎಂದರು.

ಈ ಸಂದರ್ಭ ಜಿ.ಪಂ. ಸದಸ್ಯೆ ಪಂಕಜ, ತಾಲೂಕು ಸ್ಥಾಯಿ ಸಮಿತಿ ಅಧ್ಯಕ್ಷ ಗಣೇಶ್ ಉಪಸ್ಥಿತರಿದ್ದರು.