ಮಡಿಕೇರಿ, ಜ. 25 : ಪ್ರಜಾಪ್ರಭುತ್ವ ಬಲಪಡಿಸಲು 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬರೂ ಮತದಾನ ಮಾಡುವದು ಸಂವಿಧಾನಬದ್ಧ ಕರ್ತವ್ಯವಾಗಿದೆ ಎಂದು ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಮಾಸ್ಟರ್ ಆರ್.ಕೆ.ಜಿ.ಎಂ.ಎಂ. ಮಹಾಸ್ವಾಮೀಜಿ ಕರೆ ನೀಡಿದ್ದಾರೆ.

ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಿಗೆ ಮತದಾನದ ಮೂಲಕ ಸಾರ್ವಭೌಮತ್ವವನ್ನು ನೀಡಲಾಗಿದ್ದು, ಚುನಾವಣಾ ಸಂದರ್ಭದಲ್ಲಿ ತಮ್ಮ ಹಕ್ಕು ಚಲಾಯಿಸುವಂತಾಗಬೇಕು. ಮತದಾನ ಕಾನೂನು ಬದ್ಧ ಹಕ್ಕಾಗಿದ್ದು, ಇದನ್ನು 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಗುರುತಿನ ಚೀಟಿ ಪಡೆದು ಮತವನ್ನು ನಿಷ್ಪಕ್ಷಪಾತವಾಗಿ ಚಲಾಯಿಸು ವಂತಾಗಬೇಕು ಎಂದು ಅವರು ಹೇಳಿದರು.

ಜಿಲ್ಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಮಾತನಾಡಿ ರಾಷ್ಟ್ರವು ವಿಶ್ವದಲ್ಲಿಯೇ ದೊಡ್ಡ ಪ್ರಜಾಪ್ರಭುತ್ವವನ್ನು ಹೊಂದಿದ್ದು, ದೇಶದ ಅಭಿವೃದ್ಧಿಗೆ ಮತ್ತು ಪ್ರಜಾಪ್ರಭುತ್ವದ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಜಯಕುಮಾರ್ ಮಾತನಾಡಿ ಸಿಂಗಾಪುರ, ಡೆನ್ಮಾರ್ಕ್, ಆಸ್ಟ್ರೇಲಿಯಾ ಮತ್ತಿತರ ರಾಷ್ಟ್ರಗಳಲ್ಲಿ ಮತದಾನ ಮಾಡುವದು ಕಡ್ಡಾಯವಾಗಿದೆ. ಮತದಾನ ಮಾಡದಿದ್ದಲ್ಲಿ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಅಂತಹ ಕಠಿಣ ಕಾನೂನುಗಳು ಆ ರಾಷ್ಟ್ರಗಳಲ್ಲಿ ಇವೆ ಎಂದು ತಿಳಿಸಿದರು.

ಭಾಗಮಂಡಲ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ಚುನಾವಣಾ ಮಾಸ್ಟರ್ ತರಬೇತಿದಾರ ಕೆ.ಜೆ. ದಿವಾಕರ ಪ್ರಾಸ್ತಾವಿಕವಾಗಿ ಮಾತನಾಡಿ “ಯುವ ಮತ್ತು ಭಾವಿ ಮತದಾರರ ಸಬಲೀಕರಣ 8ನೇ ರಾಷ್ಟ್ರೀಯ ಮತದಾರರ ದಿನಾಚರಣೆ” ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಜಾಪ್ರಭುತ್ವವನ್ನು ಬಲಪಡಿಸಲು ಯುವ ಜನತೆ ಚುನಾವಣಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಬೇಕು. ಜನವರಿ, 25 ನ್ನು ದೇಶದಾದ್ಯಂತ ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. ಮೊದಲ ಬಾರಿಗೆ ಮತದಾರರಾಗಿ ನೋಂದಾವಣೆ ಯಾಗಿರುವವರಿಗೆ ಗುರುತಿನ ಕಾರ್ಡ್ (ಎಪಿಕ್)ನ್ನು ಸಭೆಯಲ್ಲಿ ವಿತರಿಸಲಾಯಿತು.

ಸಭೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು. ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿ ವಿತರಿಸಲಾಯಿತು. ಯುವ ಮತದಾರರಾದ ನಿಖಿತ ಹಾಗೂ ಕೃತಿಕ ಅವರು ಮಾತನಾಡಿದರು.

ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಪ್ರೋಬೆಷನರಿ ಪೊಲೀಸ್ ಅಧಿಕಾರಿ ಯತೀಶ್, ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕಿ ಭಾಗ್ಯ, ಆಹಾರ ಇಲಾಖೆ ಉಪ ನಿರ್ದೇಶಕ ಪುಟ್ಟಸ್ವಾಮಿ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠ ಮೂರ್ತಿ, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ನಂದ, ಪೌರಾಯುಕ್ತೆ ಬಿ. ಶುಭಾ, ಕಾರ್ಮಿಕ ಇಲಾಖಾ ಅಧಿಕಾರಿ ರಾಮಕೃಷ್ಣ, ತಹಶೀಲ್ದಾರ್ ಕುಸುಮ, ಚುನಾವಣಾ ಶಿರಸ್ತೆದಾರರಾದ ಪ್ರಕಾಶ್, ಅನಿಲ್ ಕುಮಾರ್, ಸಿನೋಜ್ ಮತ್ತಿತರರು ಇದ್ದರು.

ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ ಅವರು ಸ್ವಾಗತಿಸಿದರು.

ಸಂತ ಜೋಸೆಫರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು. ಉಪನ್ಯಾಸಕರಾದ ಕೆ.ಜೆ.ದಿವಾಕರ ನಿರೂಪಿಸಿ, ವಂದಿಸಿದರು.