ಮಡಿಕೇರಿ, ಜ. 24 : ರಾಜಾಸೀಟು ಉದ್ಯಾನವನದಲ್ಲಿ ಮಾರ್ಚ್ 9 ರಿಂದ ಮೂರು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಏರ್ಪಡಿಸಲು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಕಳೆದ ಎರಡು ವರ್ಷಗಳಿಂದ ರಾಜಾಸೀಟಿನಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಿಲ್ಲ, ಈ ಬಾರಿ ವಿವಿಧ ಇಲಾಖೆಗಳ ಸಹಕಾರ ಪಡೆದು ಫಲಪುಷ್ಪ ಪ್ರದರ್ಶನ ವ್ಯವಸ್ಥಿತವಾಗಿ ಏರ್ಪಡಿಸುವಂತೆ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ರಾಜಾಸೀಟಿನಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸುವದರ ಜೊತೆಗೆ ನಗರದ ಗಾಂಧಿ ಮೈದಾನದಲ್ಲಿ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಏರ್ಪಡಿಸಬೇಕು. ಜಿಲ್ಲಾ ಪಂಚಾಯತ್, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಪಾಲನೆ, ಅರಣ್ಯ, ಸಹಕಾರ ಹೀಗೆ ವಿವಿಧ ಇಲಾಖೆಗಳು ವಸ್ತುಪ್ರದರ್ಶನ ಮಳಿಗೆ ನಿರ್ಮಾಣ ಮಾಡಿ, ಸಾರ್ವಜನಿಕರಿಗೆ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುವಂತಾಗಬೇಕು. ಹಾಗೆಯೇ ಒಂದು ದಿನದ ಮಟ್ಟಿಗಾದರೂ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸು ವಂತಾಗಬೇಕು ಎಂದು ಸಲಹೆ ಮಾಡಿದರು.

ಜಿ.ಪಂ. ಸಿಇಒ ಅವರ ಅಧ್ಯಕ್ಷತೆಯಲ್ಲಿ ಕೃಷಿ, ತೋಟಗಾರಿಕೆ, ಅರಣ್ಯ, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ಉಪ ಸಮಿತಿ ರಚನೆ ಮಾಡಿಕೊಂಡು ಫಲಪುಷ್ಪ ಪ್ರದರ್ಶನ ಏರ್ಪಡಿಸಲು ಅಗತ್ಯ ಕ್ರಮಕೈಗೊಳ್ಳು ವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.

ಫಲಪುಷ್ಪ ಪ್ರದರ್ಶನ ಸಂಬಂಧ ಜಿ.ಪಂ. ಸಿಇಒ ಅವರ ಅಧ್ಯಕ್ಷತೆಯಲ್ಲಿ ಉಪ ಸಮಿತಿಯ ಸಭೆ ನಡೆಸಬೇಕು. ನಂತರ ಫೆಬ್ರವರಿಯಲ್ಲಿ ಮತ್ತೊಂದು ಸಭೆ ನಡೆಸಲಾಗುವದು ಎಂದರು.

ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವದು ರಾಜಾಸೀಟಿಗೆ, ಫಲಪುಷ್ಪ ಪ್ರದರ್ಶನ ಬಗ್ಗೆ ಹೆಚ್ಚಿನ ನಿರೀಕ್ಷೆ ಪ್ರವಾಸಿಗರಿಗೆ ಇರುತ್ತದೆ. ಫಲಪುಷ್ಪ ಪ್ರದರ್ಶನವನ್ನು ಆಕರ್ಷಣಿಯವಾಗಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ರಾಜಾಸೀಟಿನ ಸಂಗೀತ ಕಾರಂಜಿ ಇನ್ನೂ ಕಾರ್ಯರೂಪಕ್ಕೆ ಬರದಿರುವ ದಕ್ಕೆ ಜಿಲ್ಲಾಧಿಕಾರಿ ಅವರು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.

ಜಿ.ಪಂ. ಸಹಾಯಕ ಕಾರ್ಯದರ್ಶಿ ಶ್ರೀಕಂಠಮೂರ್ತಿ, ಲೋಕೋಪಯೊಗಿ ಇಲಾಖೆಯ ಎಇಇ ನಟೇಶ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ರಾಮಪ್ಪ, ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್, ನಗರಸಭೆ ವ್ಯವಸ್ಥಾಪಕಿ ಸುಜಾತಾ, ತೋಟಗಾರಿಕೆ ಸಹಾಯಕ ನಿರ್ದೇಶಕ ಪ್ರಮೋದ್, ಪ್ರವಾಸೋದ್ಯಮ ಇಲಾಖೆ ಪ್ರವಾಸಿ ಅಧಿಕಾರಿ ರಾಘವೇಂದ್ರ, ಸೆಸ್ಕ್ ಇಂಜಿನಿಯರ್ ರಾಮಕಾಂತ್ ಇತರರು ಇದ್ದರು.