ಸೋಮವಾರಪೇಟೆ, ಜ. 24: ಸಂಸ್ಕಾರದೊಂದಿಗೆ ವೈಜ್ಞಾನಿಕ ಶಿಕ್ಷಣ ಅಳವಡಿಸಿ ಕೊಳ್ಳುವತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕೆಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕರೆ ನೀಡಿದರು.

ಸಮೀಪದ ಬಿಟಿಸಿಜಿ ಸರ್ಕಾರಿ ಪದವಿ ಕಾಲೇಜಿನಲ್ಲಿ 2016-17ನೇ ಸಾಲಿನಲ್ಲಿ ಪ್ರಥಮ ಪದವಿಗೆ ಪ್ರವೇಶ ಪಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ನೀಡಲಾಗುವ ಲ್ಯಾಪ್‍ಟಾಪ್ ವಿತರಿಸಿ ಅವರು ಮಾತನಾಡಿದರು.

ಶೈಕ್ಷಣಿಕ ಅವಧಿಯಲ್ಲಿ ವಿದ್ಯಾರ್ಥಿಗಳು ಹೆಚ್ಚು ಅಂಕಗಳಿಸುವತ್ತ ಗಮನಹರಿಸಬೇಕು. ಇದರೊಂದಿಗೆ ಸಂಸ್ಕಾರ ಹಾಗೂ ವೈಜ್ಞಾನಿಕ ಚಿಂತನೆಗಳನ್ನು ಅಳವಡಿಸಿಕೊಂಡು ಶೈಕ್ಷಣಿಕವಾಗಿ ಸಾಧನೆ ತೋರಬೇಕು. ಸರ್ಕಾರದ ಯೋಜನೆಗಳನ್ನು ಎಲ್ಲ ವಿದ್ಯಾರ್ಥಿಗಳು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲರಾದ ಕೆ.ಈ. ಐಪು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಸೋಮೇಶ್ ಉಪಸ್ಥಿತರಿದ್ದರು.

ಕಾಲೇಜಿನ ಬೋಧಕೇತರ ಸಿಬ್ಬಂದಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.