ಸೋಮವಾರಪೇಟೆ, ಜ. 28: ವಿವೇಕಾನಂದ ಜಯಂತ್ಯೋತ್ಸವ ಸಮಿತಿ ವತಿಯಿಂದ ತಾ. 31 ರಂದು ಸೋಮವಾರಪೇಟೆಯಲ್ಲಿ ವಿವೇಕಾನಂದರ ಜನ್ಮ ದಿನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಮಿತಿಯ ಕಾರ್ಯದರ್ಶಿ ಎಸ್. ಮಹೇಶ್ ತಿಳಿಸಿದ್ದಾರೆ.
ತಾ. 31 ರಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿನ ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ಮೆರವಣಿಗೆ ನಡೆಯಲಿದ್ದು, 11 ಗಂಟೆಗೆ ಮಾನಸ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ. ರಾಮಕೃಷ್ಣ ಶಾರದಾಶ್ರಮದ ಶ್ರೀ ಬೋಧಸ್ವರೂಪಾನಂದ ಸ್ವಾಮೀಜಿ, ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಅವರುಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಕಾರ್ಯಕ್ರಮವನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಸಮಿತಿಯ ಅಧ್ಯಕ್ಷ ಬಿ.ಎಸ್. ಸದಾನಂದ್ ಅಧ್ಯಕ್ಷತೆ ವಹಿಸಲಿದ್ದು, ಪುತ್ತೂರು ಸ್ವಾಮಿ ವಿವೇಕಾನಂದ ವಿದ್ಯಾವರ್ಧಕ ಸಂಘದ ವಿಶೇಷ ಸಂಪರ್ಕಾಧಿಕಾರಿ ವೆಂಕಟೇಶ್ ಮುದೂರ್ ಮುಖ್ಯ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ ಭಾಗವಹಿಸಲಿದ್ದಾರೆ.
ವಿವೇಕಾನಂದ ಜಯಂತಿ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವದು ಎಂದು ಮಹೇಶ್ ತಿಳಿಸಿದ್ದಾರೆ.