ಮಡಿಕೇರಿ, ಜ. 28: ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಕಾರ್ಯಕ್ರಮದಡಿ ಕೆ. ನಿಡುಗಣೆ ಗಾ.ಪಂ. ವ್ಯಾಪ್ತಿಯಲ್ಲಿ ಸುಮಾರು ರೂ. 1 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ಕಾಮಗಾರಿಗಳ ಬಗ್ಗೆ ಚರ್ಚಿಸಲು ಕರ್ಣಂಗೇರಿ ಗ್ರಾಮದ ಶಾಲಾ ಮೈದಾನದಲ್ಲಿ ಗ್ರಾ.ಪಂ. ಅಧ್ಯಕ್ಷೆ ರೀಟಾ ಮುತ್ತಣ್ಣ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿ.ಪಂ. ಸದಸ್ಯೆ ಯಾಲದಾಳು ಪದ್ಮಾವತಿ ಹಾಗೂ ತಾ.ಪಂ. ಸದಸ್ಯ ರಾಯ್ ತಮ್ಮಯ್ಯ ಮಾತನಾಡಿ, ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಅನುದಾನವನ್ನು ಸಮಾನವಾಗಿ ಹಂಚಿಕೆ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಲಹೆ ನೀಡಿದರು.

ಗ್ರಾಂ.ಪಂ ಸದಸ್ಯ ಜಾನ್ಸನ್ ಪಿಂಟೋ ಮಾತನಾಡಿ, ಇದೇ ಮೊದಲ ಬಾರಿಗೆ ದೊಡ್ಡ ಮೊತ್ತದ ಅನುದಾನ ಕೆ. ನಿಡುಗಣೆ ಗ್ರಾಮ ವ್ಯಾಪ್ತಿಯ ಕರ್ಣಂಗೇರಿ ಗ್ರಾಮಕ್ಕೆ ದೊರಕಿದ್ದು, ಶಾಸಕರಾದ ಅಪ್ಪಚ್ಚು ರಂಜನ್, ಶಾಂತೆಯಂಡ ವೀಣಾ ಅಚ್ಚಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಮ್ ಅವರ ಸಹಕಾರದಿಂದ ಅನುದಾನ ಬಿಡುಗಡೆಯಾಗಿದೆ ಎಂದರು.

ನೋಡಲ್ ಅಧಿಕಾರಿ ಡಾ. ಕೆ.ಎ. ಪ್ರಸನ್ನ, ಇಂಜಿನಿಯರ್ ಗವಿಸಿದ್ದಯ್ಯ, ಗ್ರಾ.ಪಂ. ಉಪಾಧ್ಯಕ್ಷೆ ಜಾಜಿ ಸತೀಶ್, ಸದಸ್ಯರಾದ ಹೆಚ್.ಆರ್. ಪ್ರೇಮ್ ಕುಮಾರ್, ಬಿ.ಎ. ಆನಂದ, ಜಯಮ್ಮ, ಸುಬ್ಬ, ದೇವಕಿ ಮತ್ತು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಬಿ. ಬೋಪಣ್ಣ ಮತ್ತಿತರರು ಉಪಸ್ಥಿತರಿದ್ದರು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಎ.ಪಿ. ದೇವಯ್ಯ ಸ್ವಾಗತಿಸಿದರು. ಇದೇ ಸಂದರ್ಭ ವಿವಿಧ ಕಾಮಗಾರಿಗಳಿಗೆ ಗ್ರಾಮಸ್ಥರಿಂದ ಅರ್ಜಿಯನ್ನು ಸ್ವೀಕರಿಸಲಾಯಿತು.