ಸೋಮವಾರಪೇಟೆ, ಜ. 28: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ಆಶ್ರಯದಲ್ಲಿ ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ಮತದಾರರ ದಿನಾಚರಣೆ ಮತ್ತು ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ ಅರಿವು ಕಾರ್ಯಾಗಾರ ನಡೆಯಿತು.

ಸೋಮವಾರಪೇಟೆ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ್ ಎಫ್. ದೊಡ್ಡಮನಿ ಕಾರ್ಯಾಗಾರವನ್ನು ಉದ್ಘಾಟಿಸಿದರು. 18 ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸುವ ಮೂಲಕ ಮತದಾನದಲ್ಲಿ ಭಾಗವಹಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದು ನ್ಯಾಯಾಧೀಶರು ಕರೆ ನೀಡಿದರು.

ವೇದಿಕೆಯಲ್ಲಿ ಸಿವಿಲ್ ನ್ಯಾಯಾಧೀಶ ಶ್ಯಾಮ್ ಪ್ರಕಾಶ್, ತಾಲೂಕು ತಹಶೀಲ್ದಾರ್ ಮಹೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಪೊಲೀಸ್ ಠಾಣಾಧಿಕಾರಿ ಶಿವಣ್ಣ ಅವರುಗಳು ಉಪಸ್ಥಿತರಿದ್ದರು.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸುವ ಬಗ್ಗೆ ಅತಿಥಿಗಳು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಯುವ ಮತದಾರರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ಮತದಾನದ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.