ಕೂಡಿಗೆ, ಜ. 31: ಕೂಡಿಗೆ ಸೈನಿಕ ಶಾಲೆಯಲ್ಲಿ ಹತ್ತನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭ ನೂತನವಾಗಿ ನಿರ್ಮಾಣಗೊಂಡಿರುವ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮ ವಿಭಾಗದ ಮುಖ್ಯಸ್ಥ ಡಾ. ಬಿ.ಪಿ. ಮಹೇಶ್ ಚಂದ್ರ ಗುರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಹಾಗೂ ಮನುಷ್ಯನಲ್ಲಿರುವ ಸಂಶಯ ಮತ್ತು ಭಯವನ್ನು ಹೋಗಲಾಡಿಸಲು ವಿವೇಕಾನಂದ, ಬುದ್ಧ, ಬಸವಣ್ಣ, ಅಂಬೇಡ್ಕರ್‍ರವರ ತತ್ವಗಳನ್ನು ಮೈಗೂಡಿಸಿಕೊಂಡು ಆದರ್ಶ ನಾಗರಿಕರಾಗಿ ಬದುಕಬೇಕು ಎಂದರು.

ಶಾಲೆಯ ಪ್ರಾಂಶುಪಾಲ ಗ್ರೂಪ್ ಕ್ಯಾಪ್ಟನ್ ಆರ್.ಆರ್. ಲಾಲ್ ಶೈಕ್ಷಣಿಕ ವರದಿ ವಾಚಿಸಿದರು. ಶಾಲೆಯಲ್ಲಿ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ಸಮರ್ಥವಾಗಿ ನಾಯಕತ್ವ ಗುಣಗಳನ್ನು ಪ್ರದರ್ಶಿಸಿದ ಶಾಲೆಯ ನಾಯಕ, ಉಪನಾಯಕ ಎಲ್ಲಾ ನಿಲಯಗಳ ನಾಯಕರುಗಳಿಗೆ ಪ್ರಶಸ್ತಿಪತ್ರ ಮತ್ತು ಪಾರಿತೋಷಕವನ್ನು ನೀಡಿ ಗೌರವಿಸಲಾಯಿತು. 2017-18ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆಗೈದ ಸುಬ್ರತೋ ನಿಲಯಕ್ಕೆ ‘ಕಾಕ್ ಹೌಸ್’ ಪಾರಿತೋಷಕವನ್ನು ಹಾಗೂ ಅಂತರ ನಿಲಯ ಎನ್.ಸಿ.ಸಿ. ಡ್ರಿಲ್ ಸ್ಪರ್ಧೆಯಲ್ಲಿ ವಿಜೇತರಾದ ಕಾರ್ಯಪ್ಪ ನಿಲಯಕ್ಕೆ ಪಾರಿತೋಷಕವನ್ನು ಪ್ರದಾನ ಮಾಡಲಾಯಿತು.

ಶಾಲಾ ಶಿಕ್ಷಕಿ ಶ್ರೀಲೇಖಾ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ದೇಶಭಕ್ತಿಯನ್ನು ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭ ಉಪ ಪ್ರಾಂಶುಪಾಲ ಸ್ಕ್ವಾಡ್ರನ್ ಲೀಡರ್ ಡಿ. ಮ್ಯಾಥ್ಯು, ಹಿರಿಯ ಶಿಕ್ಷಕ ಎಸ್. ಸೂರ್ಯನಾರಾಯಣ, ಬೋಧಕ, ಬೋಧಕೇತರ ವರ್ಗದವರು, ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು ಇದ್ದರು. ಕೆಡೆಟ್ ಜೀತ್ ಮತ್ತು ಪವನ್ ತಿಮ್ಮಯ್ಯ ಕಾರ್ಯಕ್ರಮ ನಿರ್ವಹಿಸಿದರು.