ಮಡಿಕೇರಿ: ವಿದ್ಯಾರ್ಥಿ ಜೀವನದಲ್ಲಿ ಯುವಜನತೆ ಸಕಾರಾತ್ಮಕವಾಗಿ ಚಿಂತಿಸಿ ಸಕಾರಾತ್ಮಕವಾಗಿ ಕಾರ್ಯ ಪ್ರವೃತ್ತರಾಗಿ ರಾಷ್ಟ್ರ ನಿರ್ಮಾಣ ಮಾಡಬೇಕೆಂದು ಕಾವೇರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಪ್ರೊ. ಎಂ.ಬಿ. ಕಾರ್ಯಪ್ಪ ಅಭಿಪ್ರಾಯಪಟ್ಟರು. ಪಾಲಿಬೆಟ್ಟ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವದಂದು ಮುಖ್ಯ ಭಾಷಣಗಾರರಾಗಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತ್ತೋಮುಖ ಬೆಳವಣಿಗೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ಸಮಾಜ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇವರುಗಳಿಗೆ ವಿದ್ಯಾರ್ಥಿಗಳು ಋಣಿಯಾಗಿದ್ದು ಇವರ ಮೌಲ್ಯಗಳನ್ನು ಮೈಗೂಡಿಸಿಕೊಂಡು ಉತ್ತಮ ಪ್ರಯತ್ನದಿಂದ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ಬದುಕಬೇಕೆಂದರು.
ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ರಾಮಕೃಷ್ಣಾಶ್ರಮದ ನಿರ್ದೇಶಕ ಪರಹಿತಾನಂದ ಸ್ವಾಮೀಜಿ ಮಾತನಾಡಿ, ಕಾಲೇಜುಗಳಲ್ಲಿ ಸಿಗುವ ಒಳ್ಳೆಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು, ತಿರುವಾದಿರ ನೃತ್ಯ ಹಾಗೂ ದೇಶಭಕ್ತಿ ಕವಾಲಿಯನ್ನು ಪ್ರದರ್ಶಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪುಲಿಯಂಡ ಬೋಪಣ್ಣ, ಸದಸ್ಯರಾದ ಕೂತಂಡ ಬೋಜಮ್ಮ ಮಂದಣ್ಣ, ಕಾಲೇಜಿನ ಪ್ರಾಚಾರ್ಯೆ ಡಾ. ಕೆ.ಎಂ. ಭವಾನಿ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ತಸ್ಲಿಮಾ ಮತ್ತು ತಾಹಿರ ಪ್ರಾರ್ಥಿಸಿದರು.