ಮೂರ್ನಾಡು, ಜ. 30 : ಸರಕಾರಿ ಮಾದರಿ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ ನಡೆಯಿತು. ಶಾಲಾ ಸಭಾಂಗಣದಲ್ಲಿ ಆಯೋಜಿಸಲಾದ ವಾರ್ಷಿಕೋತ್ಸವ ಸಮಾರಂಭವನ್ನು ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಸದಸ್ಯೆ ಪಿ.ಸಿ. ಸುಜಾತ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ಮುಂದೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಕರೆನೀಡಿದರು.
ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಲುಮುಟ್ಲು ಜಮುನ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ ಮಕ್ಕಳ ಶಿಕ್ಷಣದತ್ತ ಶಿಕ್ಷಕರೊಂದಿಗೆ ಪೋಷಕರು ಗಮನ ಹರಿಸಬೇಕು. ಆಗ ಮಾತ್ರ ವಿದ್ಯಾರ್ಥಿಗಳು ಮುತುವರ್ಜಿ ವಹಿಸಿ ಪಾಠ ಪ್ರವಚನಗಳನ್ನು ಕಲಿಯುವಂತಾಗುತ್ತದೆ ಎಂದರು.
ಶಾಲಾ ಎಸ್ಡಿಎಂಸಿ ಅಧ್ಯಕ್ಷ ದಿನೇಶ್ ಅಧ್ಯಕ್ಷತೆ ವಹಿಸಿದರು. ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಸದಸ್ಯ ಹೆಚ್.ಆರ್. ರವಿ, ಈರ ಸುಬ್ಬಯ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಜಯಂತಿ, ಶಾಲಾ ಮುಖ್ಯ ಶಿಕ್ಷಕಿ ಸರೋಜ, ಶಿಕ್ಷಕ ವೃಂದ ಹಾಗೂ ಎಸ್ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಮಾಜಿ ಅಧ್ಯಕ್ಷ ಎ.ಟಿ. ಸುರೇಶ್ ಹಾಗೂ ಉಪಾಧ್ಯಕ್ಷ ಮನೋಜ್ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು.
ವಾರ್ಷಿಕೋತ್ಸವ ಅಂಗವಾಗಿ ವಿದ್ಯಾರ್ಥಿಗಳು ಸಾಮೂಹಿಕ ಕವಾಯತು ಪ್ರದರ್ಶಿಸಿದರು. ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ, ಪೋಷಕರಿಗೆ, ಎಸ್ಡಿಎಂಸಿ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು. ಕಳೆದ ಸಾಲಿನಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನ ನೀಡಲಾಯಿತು. ವಿದ್ಯಾರ್ಥಿಗಳು ತಯಾರಿಸಿದ ವಿವಿಧ ಮಾದರಿಗಳ ವಸ್ತು ಪ್ರದರ್ಶನ ನೆರೆದ ಸಭಿಕರ ಗಮನ ಸೆಳೆಯಿತು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.