ಮಡಿಕೇರಿ, ಫೆ. 4: ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ತಾ. 10 ರಂದು ನ್ಯಾಯಾಲಯದ ಆವರಣಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ ಎಂದು ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಆರ್ಕೆಜಿ ಎಂ.ಎಂ. ಮಹಾಸ್ವಾಮೀಜಿ ತಿಳಿಸಿದ್ದಾರೆ.
ನಗರದ ಜಿಲ್ಲಾ ನ್ಯಾಯಾಲಯ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತಾ. 10 ರಂದು ಲೋಕ ಅದಾಲತ್ ಮೂಲಕ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಬಹುದಾಗಿದೆ. ಆ ನಿಟ್ಟಿನಲ್ಲಿ ಲೋಕ ಅದಾಲತ್ ಕಾರ್ಯಕ್ರಮದ ಸದುಪಯೋಗವನ್ನು ಸಂಬಂಧ ಪಟ್ಟವರು ಪಡೆದುಕೊಳ್ಳುವಂತಾಗಬೇಕು ಎಂದು ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಸಲಹೆ ಮಾಡಿದ್ದಾರೆ.
ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಡಿ. ಪವನೇಶ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಜಯಕುಮಾರ್, ಜೆಎಂಎಫ್ಸಿ ನ್ಯಾಯಾಧೀಶೆ ಶರ್ಮಿಳಾ ಕಾಮತ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುಂಡೇಗೌಡ, ವಕೀಲ ಗಣಪತಿ, ಪೊಲೀಸ್ ಇನ್ಸ್ಪೆಕ್ಟರ್ ವೆಂಕಟರಮಣ, ನಗರಸಭೆಯ ಕಂದಾಯಾಧಿಕಾರಿ ಸ್ವಾಮಿ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ ಇತರರು ಇದ್ದರು.