ಮಡಿಕೇರಿ, ಫೆ. 7: ಸಮಾಜವಾದಿ ಪಾರ್ಟಿಯು ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಶಕ್ತವಾಗಿದ್ದರೂ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ರಾಜ್ಯದ 30-50 ಸ್ಥಾನಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಾರೆ. ಅದರಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷದ ಜಿಲ್ಲಾಧ್ಯಕ್ಷ ಚೀಯಂಡಿರ ಕಿಶನ್ ಉತ್ತಪ್ಪ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಕಿರಣ್ ಚೆಟ್ಟಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವ ಸಮುದಾಯದ ಧ್ವನಿಯಾಗಲು ಮುಂಬರುವ ಚುನಾವಣೆಯಲ್ಲಿ ಜಿಲ್ಲೆಯ ಎರಡೂ ಕ್ಷೇತ್ರಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ವೀರಾಜಪೇಟೆ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯನ್ನು ಶೀಘ್ರದಲ್ಲೇ ಘೋಷಿಸಲಾಗುವದು ಎಂದು ತಿಳಿಸಿದರು. ಭ್ರಷ್ಟಾಚಾರ ರಹಿತ ಪಾರದರ್ಶಕ ಆಡಳಿ ವ್ಯವಸ್ಥೆಯಾಗಬೇಕೆಂಬದೇ ಪಕ್ಷದ ಮುಖ್ಯ ಧ್ಯೇಯವಾಗಿದ್ದು, ಸಮಾಜವಾದಿ ಸಿದ್ಧಾಂತ ಹೊಂದಿರುವ ಪಕ್ಷ ದೀನದಲಿತ, ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹೆಚ್ಚು ಶ್ರಮಿಸಲಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಚೀಯಂಡಿರ ಕಿಶನ್ ಉತ್ತಪ್ಪ, ಉಪಾಧ್ಯಕ್ಷ ಕೊರವಂಡ ದೇವಯ್ಯ ಹಾಗೂ ನಗರ ಪ್ರಚಾರ ಸಮಿತಿ ಅಧ್ಯಕ್ಷ ಮಹದೇವ ಉಪಸ್ಥಿತರಿದ್ದರು.