ಮಡಿಕೇರಿ ಫೆ.7 :ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮೈಸೂರು ವಿಭಾಗದ ಜಿಲ್ಲೆಗಳಾದ ಕೊಡಗು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಾಮರಾಜನಗರ, ಮಂಡ್ಯ, ಮೈಸೂರು, ಉಡುಪಿ, ಹಾಸನದ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿಗಳು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳ ಮಹತ್ವದ ಸಭೆ ನಗರದ ಹೊಟೇಲ್ ವ್ಯಾಲಿವ್ಯೂ ಸಭಾಂಗಣದಲ್ಲಿ ನಡೆಯಿತು.
ಎಐಸಿಸಿ ಕಾರ್ಯದರ್ಶಿಗಳು ಮತ್ತು ಮೈಸೂರು ವಿಭಾಗೀಯ ಉಸ್ತುವಾರಿ ಕಾರ್ಯದರ್ಶಿಗಳಾದ ವಿಷ್ಣುನಾಧನ್ ಅವರು ಸಭೆಯಲ್ಲಿದ್ದ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿ ಮುಂಬರುವ ಚುನಾವಣೆಗೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು.
ಮುಂದೆ ಪಕ್ಷದ ವಿವಿಧ ಘಟಕಗಳು ಕೈಗೊಳ್ಳಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ವಿಷ್ಣುನಾದನ್ ಎಲ್ಲಾ ಜಿಲ್ಲೆಗಳ ಪದಾಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಿದರು. ಸಾಮೂಹಿಕ ತಳಪಾಯ ಹೊಂದಿರುವ ಕಾಂಗ್ರೆಸ್ ಪಕ್ಷ ಒಗ್ಗಟ್ಟಿನಲ್ಲಿ ಬಲವಿದೆ ಎನ್ನುವದನ್ನು ತೋರಿಸಿಕೊಟ್ಟಿದೆ. ಒಗ್ಗೂಡಿ ಚುನಾವಣೆಯನ್ನು ಎದುರಿಸುವ ಮೂಲಕ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತರಲು ಎಲ್ಲರು ಪ್ರಯತ್ನಿಸಬೇಕೆಂದು ಅವರು ಕರೆ ನೀಡಿದರು.
ಸಧ್ಯದಲ್ಲಿಯೇ ಕೊಡಗಿನ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗುವದು ಎಂದು ವಿಷ್ಣುನಾಧನ್ ಇದೇ ಸಂದರ್ಭ ತಿಳಿಸಿದರು.
ಕೆಪಿಸಿಸಿಯ ಹಿರಿಯ ಉಪಾಧ್ಯಕ್ಷ ಮಿಟ್ಟುಚಂಗಪ್ಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಚಂದ್ರಕಲಾ, ಸುಮಾವಸಂತ್, ಜಿ.ಎ.ಭಾವ, ಮಂಜುನಾಥ್ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವುಮಾದಪ್ಪ, ಮೈಸೂರು ವಿಭಾಗದ ಜಿಲ್ಲೆಗಳ ಎಲ್ಲಾ ಅಧ್ಯಕ್ಷರುಗಳು, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರ ಮೈನಾ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ಅಪ್ರು ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.