ಮಡಿಕೇರಿ, ಫೆ. 24: ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಟಿಕ ಆಹಾರ ಬಿಸಿ ಊಟ ನೀಡುವ ನಿಟ್ಟಿನಲ್ಲಿ ಮಾತೃಪೂರ್ಣ ಯೋಜನೆ ಜಾರಿಗೊಳಿಸಲಾಗಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಕರೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಕಾರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಸ್ತ್ರೀಶಕ್ತಿ ಭವನದಲ್ಲಿ ಇತ್ತೀಚೆಗೆ ನಡೆದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಡಿಕೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ದಮಯಂತಿ ಮಾತನಾಡಿ, ಮಾತೃಪೂರ್ಣ ಯೋಜನೆಯಡಿ ಮಧ್ಯಾಹ್ನದ ಒಂದು ಪೂರ್ಣ ಪೌಷ್ಟಿಕ ಬಿಸಿ ಊಟದಲ್ಲಿ ಅನ್ನ, ಸಾಂಬರ್, ಪಲ್ಯದ ಜೊತೆಗೆ ಬೇಯಿಸಿದ ಮೊಟ್ಟೆ ಮತ್ತು ಹಾಲು ಒಳಗೊಂಡಿದ್ದು, ತಿಂಗಳಿಗೆ 25 ದಿನಗಳಂತೆ, ವರ್ಷದಲ್ಲಿ ಒಟ್ಟು 300 ದಿನಗಳು ಪೌಷ್ಟಿಕ ಆಹಾರ ನೀಡಲಾಗುತ್ತದೆ. ಮೊಟ್ಟೆ ತಿನ್ನದವರಿಗೆ ಮೊಳಕೆ ಬರಿಸಿದ ಕಾಳು ಕೊಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಮೇಲ್ವಿಚಾರಕಿ ಸುನಿತಾ ಮಾತನಾಡಿದರು. ವಾರ್ತಾಧಿಕಾರಿ ಚಿನ್ನಸ್ವಾಮಿ ಮಾತನಾಡಿದರು. ಅಂಗನವಾಡಿ ಮೇಲ್ವಿಚಾರಕರು ಇತರರು ಇದ್ದರು.