ಮಡಿಕೇರಿ, ಮಾ.1 : ತಾ. 9 ರಿಂದ ಮೂರು ದಿನಗಳ ಕಾಲ ನಡೆಯುವ ಫಲಪುಷ್ಪ ಪ್ರದರ್ಶನವನ್ನು ವಿವಿಧ ಇಲಾಖೆಗಳ ಸಹಕಾರ ಪಡೆದು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಸಭಾಂಗಣದ ಕಚೇರಿಯಲ್ಲಿ ನಡೆದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸುವ ಸಂಬಂಧ ಮೂರನೇ ಸುತ್ತಿನ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಣವನ್ನು ದುಂದುವೆಚ್ಚ ಮಾಡದೆ ಸರಿಯಾದ ರೀತಿಯಲ್ಲಿ ಬಳಸಿ ಕಾರ್ಯಕ್ರಮಕ್ಕೆ ಬರುವವರಿಗೆ ಉಪಹಾರದ ವ್ಯವಸ್ಥೆ ಮಾಡುವಂತೆ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕರಿಗೆ ಪಿ.ಐ. ಶ್ರೀವಿದ್ಯಾ ಅವರು ನಿರ್ದೇಶನ ನೀಡಿದರು.
ಸಾಂಸ್ಕøತಿಕ ಕಾರ್ಯಕ್ರಮಗಳು ಸಂಜೆ ಸಮಯದಲ್ಲಿ ಮಾಡಿ ಹಾಗೂ ಸ್ಥಳೀಯರು ಮತ್ತು ಪ್ರವಾಸಿಗರು ಹೆಚ್ಚು ಬರುವದರಿಂದ ಸಂಚಾರಿ ವ್ಯವಸ್ಥೆಯನ್ನು ನಿಯಂತ್ರಿಸಬೇಕು ಎಂದು ಪಿ.ಐ.ಶ್ರೀವಿದ್ಯಾ ಅವರು ಅಧಿಕಾರಿಗಳಿಗೆ ತಿಳಿಸಿದರು.
ತೋಟಗಾರಿಕೆ ಉಪ ನಿರ್ದೇಶಕಿ ದೇವಕಿ ಅವರು ಫಲಪುಷ್ಪ ಪ್ರದರ್ಶನ ಏರ್ಪಡಿಸುವ ಸಂಬಂಧ ಇದುವರೆಗೆ ಕೈಗೊಳ್ಳಲಾಗಿರುವ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಜಿ.ಪಂ.ಸಹಾಯಕ ಕಾರ್ಯದರ್ಶಿ ಶ್ರೀಕಂಠಮೂರ್ತಿ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಮೋದ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಸಿ.ಜಗನಾಥ್, ಮಣಜೂರು ಮಂಜುನಾಥ್ ಇತರರು ಇದ್ದರು.