ಮಡಿಕೇರಿ, ಮಾ. 3: ತಾ. 11 ರಂದು ಎರಡನೇ ಹಂತದ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯಲ್ಲಿ ಪ್ರಥಮ ಹಂತದ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ಸಿನಂತೆ ಎರಡನೇ ಹಂತದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಶೇಕಡವಾರು ಯಶಸ್ಸಿಗೆ ಎಲ್ಲಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸಂಘ-ಸಂಸ್ಥೆಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಕೋರಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 2ನೇ ಹಂತದ ಪಲ್ಸ್ ಪೋಲಿಯೋ ಕಾರ್ಯಕ್ರಮ ಸಿದ್ಧತೆ ಕೈಗೊಳ್ಳುವ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿಯನ್ನು ಕಡ್ಡಾಯವಾಗಿ ಹಾಕಿಸಬೇಕು. ಕೊಡಗು ಜಿಲ್ಲೆಯಿಂದ ಹೊರ ಹೋಗುವ ಹಾಗೂ ಬರುವ ವಲಸೆ ಮಕ್ಕಳನ್ನು ಗುರುತಿಸಿ ಪಲ್ಸ್ ಪೋಲಿಯೋ ಹನಿ ಹಾಕಬೇಕು. ಹಾಗೆಯೇ ಜಿಲ್ಲೆಯ ಜನ ದಟ್ಟಣೆ ಇರುವ ಪ್ರದೇಶಗಳಲ್ಲಿ ತಂಡ ರಚಿಸಿ ಪಲ್ಸ್ ಪೋಲಿಯೋ ಹನಿ ಹಾಕುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಜಿ.ಪಂ. ಸಿಇಓ ಪ್ರಶಾಂತ್ ಕುಮಾರ್ ಮಿಶ್ರ ಮಾತನಾಡಿ, ಜಿಲ್ಲೆಯಲ್ಲಿ ಅಲ್ಲಲ್ಲಿ ಮನೆಗಳು ಇರುವದರಿಂದ ಮತ್ತು ಕುಗ್ರಾಮಗಳಿಗೆ ಪಲ್ಸ್ ಪೋಲಿಯೋ ಪೂರೈಕೆ ಮಾಡಲು ಅಗತ್ಯ ವಾಹನಗಳನ್ನು ಒದಗಿಸಬೇಕು. ಜೊತೆಗೆ ಪೋಲಿಯೋ ಲಸಿಕೆ ಹಾಳಾಗದಂತೆ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಲ್ಸ್ ಪೋಲಿಯೋ ಜಿಲ್ಲೆಯಲ್ಲಿ ಯಶಸ್ವಿಯಾಗಲು ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಪಾತ್ರ ಮಹತ್ತರವಾಗಿದ್ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಿ ಕೆಲಸ ನಿರ್ವಹಿಸಬೇಕು ಎಂದು ಜಿ.ಪಂ. ಸಿಇಓ ನಿರ್ದೇಶನ ನೀಡಿದರು.
ಜಿಲ್ಲೆಯ ವಿವಿಧ ಹಾಡಿಗಳು, ವಲ್ನರಬಲ್ ಪ್ರದೇಶ, ಲೈನ್ಮನೆಗಳು ಹಾಗೂ ಜನದಟ್ಟಣೆ ಪ್ರದೇಶಗಳಿಗೆ ತೆರಳಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಬೇಕು ಎಂದು ಪ್ರಶಾಂತ್ ಕುಮಾರ್ ಮಿಶ್ರ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಒಟ್ಟು 5,72,812 ಜನಸಂಖ್ಯೆ ಇದ್ದು, ಇವರಲ್ಲಿ 55,951 ಮಂದಿ ನಗರ-ಪಟ್ಟಣ ಪ್ರದೇಶದಲ್ಲಿ ಮತ್ತು 5,16,861 ಗ್ರಾಮೀಣ ಪ್ರದೇಶದಲ್ಲಿ ಜನಸಂಖ್ಯೆ ಇದ್ದಾರೆ. ಇವರಲ್ಲಿ 5 ವರ್ಷದೊಳಗಿನ 40,627 ಮಕ್ಕಳು ಜಿಲ್ಲೆಯಲ್ಲಿದ್ದು, ಇವರಲ್ಲಿ 4,656 ನಗರ ಮತ್ತು 35,971 ಗ್ರಾಮೀಣ ಪ್ರದೇಶದ ಮಕ್ಕಳಿದ್ದಾರೆ. ಹಾಗೆಯೇ ಜಿಲ್ಲೆಯಲ್ಲಿ 1,99,212 ವಲಸಿಗ ಜನಸಂಖ್ಯೆ ಇದ್ದು, ಇವರಲ್ಲಿ 15,394 ಐದು ವರ್ಷದೊಳಗಿನ ಮಕ್ಕಳು ಇದ್ದಾರೆ, ಒಟ್ಟಾರೆ ಜಿಲ್ಲೆಯಲ್ಲಿ 1,33,356 ಕುಟುಂಬಗಳಿವೆ ಎಂದು ಅವರು ಮಾಹಿತಿ ನೀಡಿದರು. ಜಿಲ್ಲೆಯಾದ್ಯಂತ ಒಟ್ಟು 470 ಬೂತ್ಗಳನ್ನು ತೆರೆಯಲಾಗಿದೆ. ಅಲ್ಲದೆ 20 ಟ್ರಾನ್ಸಿಸ್ಟ್ ತಂಡಗಳು, 6 ಸಂಚಾರಿ ಲಸಿಕಾ ತಂಡಗಳನ್ನು ವ್ಯವಸ್ಥೆ ಮಾಡಲಾಗಿದೆ. 1,932 ಮಂದಿ ಲಸಿಕೆ ಹಾಕುವವರು, 87 ಮಂದಿ ಮೇಲ್ವಿಚಾರಕರು, 966 ಮನೆ ಮನೆಗೆ ಭೇಟಿ ನೀಡುವ ತಂಡವನ್ನು ರಚಿಸಲಾಗಿದೆ ಎಂದು ಡಾ. ಅವರು ಮಾಹಿತಿ ನೀಡಿದರು.
ಪ್ರಥಮ ಹಂತದಲ್ಲಿ ಶೇ. 110 ರಷ್ಟು ಸಾಧನೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಾಹಿತಿ ನೀಡಿದರು. ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ. ಆನಂದ, ಡಾ. ಶಿವಕುಮಾರ್, ವೈದ್ಯಕೀಯ ಕಾಲೇಜಿನ ಡಾ. ರಾಮಚಂದ್ರ ಕಾಮತ್, ತಾಲೂಕು ವೈದ್ಯಾಧಿಕಾರಿಗಳಾದ ಡಾ. ಯತಿರಾಜು, ಡಾ. ರವಿಕುಮಾರ್, ಡಾ. ಚೇತನ್, ಐಟಿಡಿಪಿ ಅಧಿಕಾರಿ ಪ್ರಕಾಶ್, ತಾಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್, ದಿವಾಕರ, ಕಿರಣ್, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.