ಕೂಡಿಗೆ, ಮಾ. 7: ಮುಂಬರುವ ವಿಧಾನಸಭಾ ಚುನಾವಣೆಗೆ ಮಡಿಕೇರಿ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ನಾಪಂಡ ಮುತ್ತಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿಯಾದರೂ ಚುನಾವಣಾ ಅಖಾಡಕ್ಕೀಳಿಯುವ ಬಗ್ಗೆ ನಿರ್ಧರಿಸುವ ಬಗ್ಗೆ ತಿಳಿದು ಬಂದಿದೆ. ಖಾಸಗಿ ರೆಸಾರ್ಟ್‍ವೊಂದ ರಲ್ಲಿ ತಮ್ಮ ಬೆಂಬಲಿಗರೊಂದಿಗೆ ನಡೆಸಿದ ಗೌಪ್ಯ ಸಭೆಯಲ್ಲಿ ಬೆಂಬಲಿಗರ ತೀರ್ಮಾನದಂತೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದಿ ದ್ದಲ್ಲಿ ಬಂಡಾಯವಾಗಿ ಕಣಕ್ಕಿಳಿಯುವ ಬಗ್ಗೆ ನಿರ್ಧಾರ ತಳೆದಿರುವ ಬಗ್ಗೆ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಕರ್ನಾಟಕ ರಾಜ್ಯ ಐಎನ್‍ಟಿಯೂಸಿಯ ಉಪಾಧ್ಯಕ್ಷ ಸಿದ್ದಲಿಂಗಪುರದ ನಾಪಂಡ ಮುತ್ತಪ್ಪ ಅವರು ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಖಾಸಗಿ ರೆಸಾರ್ಟ್‍ನಲ್ಲಿ ಗೌಪ್ಯ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಪ್ರಮುಖವಾಗಿ ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಸಿಕ್ಕಿದ್ದಲ್ಲಿ ಕಾರ್ಮಿಕ ಸಂಘಟನೆಗಳು ಮತ್ತು ಪಕ್ಷದ ಕಾರ್ಯಕರ್ತರು ಒಗ್ಗೂಡಿ ದುಡಿಯುವದರ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆದಿದೆ. ತಾಲೂಕು ಮಟ್ಟದ ಕಾಂಗ್ರೆಸ್ ಪಕ್ಷದ ಪ್ರಮುಖರು, ಕಾರ್ಮಿಕ ಮುಖಂಡರು ಭಾಗವಹಿಸಿ ಪಕ್ಷ ಸಂಘಟನೆ ಮತ್ತು ಮುಂಬರುವ ಚುನಾವಣೆಯನ್ನು ಎದುರಿಸುವ ಬಗ್ಗೆ ಸವಿಸ್ತಾರವಾಗಿ ಚರ್ಚೆ ನಡೆಸಿರುವದಾಗಿ ತಿಳಿದುಬಂದಿದೆ.

ಪಕ್ಷದ ಹೈಕಮಾಂಡ್ ನಾಪಂಡ ಮುತ್ತಪ್ಪನವರಿಗೆ ಟಿಕೆಟ್ ನೀಡುವಂತೆ ಸಭೆಯಲ್ಲಿ ನಿರ್ಣಯ ಮಾಡಿ, ನಿರ್ಣಯ ಪತ್ರವನ್ನು ರಾಜ್ಯ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಗೂ ಹಾಗೂ ಜಿಲ್ಲಾಧ್ಯಕ್ಷರಿಗೂ ನೀಡುವಂತೆ ತೀರ್ಮಾನ ಕೈಗೊಳ್ಳಲಾಗಿದೆ. ಒಂದು ವೇಳೆ ಟಿಕೆಟ್ ಸಿಗದಿದ್ದಲ್ಲಿ ಪ್ರತ್ಯೇಕವಾಗಿ ಕಣಕ್ಕಿಳಿಯುವ ಬಗ್ಗೆ ತೀರ್ಮಾನಿಸಿರು ವದಾಗಿ ತಿಳಿದು ಬಂದಿದೆ.

- ಕೆ.ಕೆ.ಎನ್. ಶೆಟ್ಟಿ