ಸೋಮವಾರಪೇಟೆ, ಮಾ. 8 : ಸಮಾಜದ ಸರ್ವತೋಮುಖ ಬೆಳವಣಿಗೆ, ಉನ್ನತಿಯಲ್ಲಿ ಮಹಿಳೆಯರ ಪಾತ್ರ ಅನನ್ಯವಾಗಿದೆ ಎಂದು ಇಲ್ಲಿನ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ್ ಎಫ್. ದೊಡ್ಡಮನಿ ಅಭಿಪ್ರಾಯಿಸಿದರು.

ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸ್ತ್ರೀ ಶಕ್ತಿ ಭವನದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಭವಿಷ್ಯ ತಾಯಿಯ ಕೈಯಲ್ಲಿದೆ. ಮಕ್ಕಳಲ್ಲಿ ಮಾನವೀಯ ಗುಣಗಳನ್ನು ತುಂಬುವ ಕಾರ್ಯವನ್ನು ಪೋಷಕರು ಮಾಡಬೇಕಿದೆ ಎಂದ ನ್ಯಾಯಾಧೀಶರು, ದೇಶದಲ್ಲಿ ಬಲಿಷ್ಠ ಕಾನೂನಿದ್ದರೂ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿರುವದು ಕಳವಳಕಾರಿ ಎಂದರು.

ಮುಖ್ಯ ಅತಿಥಿಯಾಗಿದ್ದ ಕಿರಿಯ ಸಿವಿಲ್ ನ್ಯಾಯಾಧೀಶ ಶ್ಯಾಂಪ್ರಕಾಶ್ ಮಾತನಾಡಿ, ಮಹಿಳೆಯರು ಅತಿ ಆಸೆಗೆ ಬಲಿಯಾಗಬಾರದು. ಸಾಧಕ ಮಹಿಳೆಯರನ್ನು ಆದರ್ಶವನ್ನಾಗಿಸಿ ಕೊಳ್ಳಬೇಕು. ತಾವು ಶಿಕ್ಷಿತರಾಗುವ ಮೂಲಕ ಸಮಾಜದ ಅಜ್ಞಾನವನ್ನು ಹೋಗಲಾಡಿಸಬೇಕು ಎಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಅಭಿಮನ್ಯುಕುಮಾರ್ ಮಾತನಾಡಿ, ಮಹಿಳೆಯರಲ್ಲಿ ಜಾಗೃತಿ, ಲೈಂಗಿಕ ಶೋಷಣೆ, ಲಿಂಗ ತಾರತಮ್ಯಗಳ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯ ಆಗಬೇಕು. ಮಹಿಳಾ ಸಾಧಕರನ್ನು ಗುರುತಿಸಿ ಅವರಿಂದ ಸಮಾಜಕ್ಕೆ ಮಾರ್ಗದರ್ಶನ ಒದಗಿಸಬೇಕು ಎಂದರಲ್ಲದೇ, ಮಹಿಳೆಯರನ್ನು ದೇವತೆ, ಮಾತೆಗೆ ಹೋಲಿಸುತ್ತಿದ್ದರೂ ಪ್ರತಿ 2 ನಿಮಿಷಕ್ಕೊಮ್ಮೆ ಮಹಿಳಾ ದೌರ್ಜನ್ಯ ನಡೆಯುತ್ತಿರುವದು ದೌರ್ಭಾಗ್ಯ ಎಂದರು. ವೇದಿಕೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್, ಮಹಿಳಾ ಮೇಲ್ವಿಚಾರಕಿ ಶೀಲಾ ಅವರುಗಳು ಉಪಸ್ಥಿತರಿದ್ದರು.