ಶಿಬಿರದಿಂದ ವ್ಯಕ್ತಿತ್ವ ವಿಕಸನ

ಸೋಮವಾರಪೇಟೆ: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದಲ್ಲಿ ಭಾಗವಹಿಸುವದರಿಂದ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ ಎಂದು ತಾ.ಪಂ. ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವಾ ಅಭಿಪ್ರಾಯಿಸಿದರು.

ಇಲ್ಲಿನ ಸಂತ ಜೋಸೆಫರ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸಮೀಪದ ನೇರುಗಳಲೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವಿದ್ಯಾರ್ಥಿಗಳು ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಡಿಸಿಲ್ವಾ ಅವರು ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಟೆನ್ನಿ ಕುರಿಯನ್ ವಹಿಸಿದ್ದರು. ವೇದಿಕೆಯಲ್ಲಿ ಕಾರ್ಯಕ್ರಮದ ಯೋಜನಾಧಿಕಾರಿ ಬಿ.ಜಿ. ಆನಂದ್ ಹಾಗೂ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಶಾಲಾ ಆವರಣವನ್ನು ಶುಚಿಗೊಳಿಸುವದರೊಂದಿಗೆ, ಗಿರಿಜನ ಹಾಡಿಯಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು.

ಕಾಲೇಜು ವಾರ್ಷಿಕೋತ್ಸವ

ಮಡಿಕೇರಿ: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ತಾ. 16 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕಾಲೇಜು ಆವರಣದಲ್ಲಿ ನಡೆಯಲಿದೆ.

ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಸ.ಪ್ರ.ದ. ಕಾಲೇಜಿನ ಪ್ರಾಂಶುಪಾಲೆ ಜೆನ್ನಿಫರ್ ಲೋಲಿಟ, ಸಾಹಿತಿ ನಾಗೇಶ್ ಕಾಲೂರು ಮತ್ತು ಇತರರು ಭಾಗವಹಿಸಲಿದ್ದಾರೆ.