ನಾಪೋಕ್ಲು, ಮಾ. 14: ಸಮೀಪದ ಹೊದವಾಡ-ಕ್ಯಾಮಾಟ್ ಸಂಪರ್ಕ ರಸ್ತೆಯು ಸಂಪೂರ್ಣ ದುಸ್ಥಿತಿಯಿಂದ ಕೂಡಿದ್ದು ರಸ್ತೆ ದುರಸ್ತಿ ಕೈಗೊಳ್ಳದಿದ್ದರೆ ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.

ಹೊದವಾಡ-ಕ್ಯಾಮಾಟ್ ಸಂಪರ್ಕ ರಸ್ತೆಯು ಇದೀಗ ರಸ್ತೆ ತೀರಾ ಹದಗೆಟ್ಟಿದೆ. ವಾಹನ ಸಂಚಾರ ಸಾಧ್ಯವೇ ಇಲ್ಲದ ಪರಿಸ್ಥಿತಿ ನಿರ್ಮಾಣ ವಾಗಿದೆ ಎಂದು ದೂರಿರುವ ಗ್ರಾಮಸ್ಥರು ರಸ್ತೆ ಹೊಂಡದಲ್ಲಿ ಬಾಳೆಯ ಗಿಡ ನೆಟ್ಟು ಪ್ರತಿಭಟನೆ ನಡೆಸಿದರು. ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಅಭಿವೃದ್ಧಿ ಕಾರ್ಯ ನಡೆದಿಲ್ಲ. ಸುತ್ತಮುತ್ತಲ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ತೊಂದರೆಯಾಗಿದೆ. ಈ ರಸ್ತೆಯಲ್ಲಿ ನೂರಾರು ವಾಹನಗಳು ಸಂಚರಿಸುತ್ತಿವೆ. ತಕ್ಷಣ ರಸ್ತೆ ದುರಸ್ತಿ ಕಾರ್ಯಕ್ಕೆ ಸಂಬಂಧಪಟ್ಟವರು ಮುಂದಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಹದಿನೈದು ದಿನಗಳಲ್ಲಿ ರಸ್ತೆ ದುರಸ್ತಿಗೆ ಮುಂದಾಗ ದಿದ್ದಲ್ಲಿ ಪ್ರತಿಭಟನೆ ನಡೆಸುವದಾಗಿ ಹಾಗೂ ಮುಂಬರುವ ಚುನಾವಣೆ ಯನ್ನು ಬಹಿಷ್ಕರಿಸುವದಾಗಿ ಅವರು ಎಚ್ಚರಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವದು ಎಂದಿದ್ದಾರೆ. ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಅಸ್ಕರ್, ಗಗನ್, ಭಾಸ್ಕರ್, ದೇವಪ್ಪ, ಸುರೇಶ, ಲಲಿತ, ಕುಟ್ಟಪ್ಪ, ದಾಮೋದರ, ಮನು ಮತ್ತಿತರರು ಪಾಲ್ಗೊಂಡಿದ್ದರು.