ಗೋಣಿಕೊಪ್ಪ ವರದಿ, ಮಾ. 19 : ತಾಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿರುವ ಹಿನ್ನೆಲೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ನೆಲ್ಲೀರ ಚಲನ್ ಸೂಚನೆ ನೀಡಿದರು.
ಪೊನ್ನಂಪೇಟೆ ಸಾಮಥ್ರ್ಯ ಸೌಧ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಡಿಓಗಳು ಶ್ರೀಘ್ರವಾಗಿ ವರದಿ ತಯಾರಿಸಿ ಗ್ರಾಮೀಣ ಕುಡಿಯುವ ನೀರಿನ ಸರಬರಾಜು ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿಯರ್ ಅವರಿಗೆ ಸಲ್ಲಿಸುವಂತೆ ಸಲಹೆ ನೀಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ತಾ.ಪಂ ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ಮಾತನಾಡಿ, ಕೆಲವು ಅಧಿಕಾರಿಗಳು ನಿರಂತರವಾಗಿ ಸಭೆಗೆ ಗೈರಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಮಾಲ್ದಾರೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ ತಿತಿಮತಿ ಸರ್ಕಾರಿ ಶಾಲೆಗೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜಾಗುತ್ತಿಲ್ಲ ಎಂದು ಅಲ್ಲಿನ ಪಿಡಿಓಗಳು ಸಭೆಯ ಗಮನ ಸೆಳೆದರು.
ಇದಕ್ಕೆ ಉತ್ತರಿಸಿದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರು ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿಗಳು ಸಭೆ ಕರೆದಿರುವ ಹಿನ್ನೆಲೆ ಪಿಡಿಓಗಳ ವರದಿ ಆದರಿಸಿ ಜಿಲ್ಲಾಧಿಕಾರಿಗಳ ಗಮನ ಸೆಳೆಯುವದಾಗಿ ಹೇಳಿದರು.
ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಮಾತನಾಡಿ ಮಾತೃವಂದನಾ ಯೋಜನೆಯಡಿಯಲ್ಲಿ 200 ಪಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಾಹಿತಿ ನೀಡಿ 33.32 ಲಕ್ಷ ರೂ ಅನುದಾನದಲ್ಲಿ 33.21 ಲಕ್ಷ ರೂ ಬಳಕೆಯಾಗಿದೆ. 1649 ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ 424 ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ವಿತರಿಸಲಾಗಿದೆ ಎಂದು ಹೇಳಿದರು. ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಂ ಗಣೇಶ್, ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಇದ್ದರು.