ಕುಶಾಲನಗರ, ಮಾ. 22: ಕೆಲವು ರಾಜಕೀಯ ಪ್ರೇರಿತ ಶಕ್ತಿಗಳ ಕೈವಾಡದಿಂದ ಕುಶಾಲನಗರದಲ್ಲಿ ಒಳಚರಂಡಿ ಯೋಜನೆ ಕಾಮಗಾರಿ ಸೇರಿದಂತೆ ಜಿಲ್ಲೆಯ ವಿವಿಧ ಕಾಮಗಾರಿಗಳು ವಿಳಂಬವಾಗುತ್ತಿವೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ಹೇಳಿದ್ದಾರೆ.
ಅವರು ಕೊಡಗು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಆಶ್ರಯದಲ್ಲಿ ಕುಶಾಲನಗರದಲ್ಲಿ ನೂತನವಾಗಿ ಆರಂಭಿಸಿದ ಸರಕಾರಿ ಆಯುರ್ವೇದ ಮತ್ತು ಹೋಮಿಯೋಪತಿ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದರು. ಸರಕಾರ ಕೊಡಗು ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರಲ್ಲಿ ಗೊಂದಲ ಉಂಟುಮಾಡುವ ಮೂಲಕ ಅಭಿವೃದ್ಧಿ ಕೆಲಸಗಳಿಗೆ ವಿರೋಧ ಪಕ್ಷಗಳು ಅಡ್ಡಿಯುಂಟುಮಾಡುತ್ತಿವೆ ಎಂದು ಆರೋಪಿಸಿದರು. ಈ ಸಂದರ್ಭ ಕಾವೇರಿ ನದಿಯಲ್ಲಿ ನೀರಿನ ಹರಿವು ಸ್ಥಗಿತಗೊಂಡು ಉಂಟಾಗಿರುವ ಕುಡಿವ ನೀರಿನ ಅಭಾವದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಸರಕಾರದ ಮಟ್ಟದಲ್ಲಿ ಸಮಸ್ಯೆ ಬಗೆಹರಿಸಲು ಕಾರ್ಯಯೋಜನೆ ರೂಪಿಸಲಾಗಿದೆ. ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲಾಗುವದು ಎಂದರು.
ಈ ಸಂದರ್ಭ ಕೊಡಗು ಜಿಲ್ಲಾ ಪಂಚಾಯ್ತಿ ಸದಸ್ಯರುಗಳಾದ ಕೆ.ಪಿ.ಚಂದ್ರಕಲಾ, ಕುಮುದ ಧರ್ಮಪ್ಪ, ಕೆ.ಆರ್.ಮಂಜುಳಾ, ಪಿ.ಎಂ.ಲತೀಫ್, ಕುಡಾ ಅಧ್ಯಕ್ಷ ಬಿ.ಜಿ.ಮಂಜುನಾಥ್, ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ, ಪಕ್ಷದ ಪ್ರಮುಖರಾದ ಮಿಟ್ಟು ಚಂಗಪ್ಪ, ಚಂದ್ರಮೌಳಿ, ಲೋಕೇಶ್, ಪಟ್ಟಣ ಪಂಚಾಯಿತಿ ಸದಸ್ಯ ಫಜಲುಲ್ಲಾ, ಜೋಸೆಫ್ ವಿಕ್ಟರ್ ಸೋನ್ಸ್, ವಿ.ಪಿ.ಶಶಿಧರ್, ಆರ್.ಕೆ. ನಾಗೇಂದ್ರಬಾಬು, ಎಸ್.ಎನ್. ನರಸಿಂಹಮೂರ್ತಿ, ಜಿಲ್ಲಾ ಆಯುಷ್ ಅಧಿಕಾರಿ, ಡಾ.ಬಿ.ಹೆಚ್.ರಾಮಚಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರ್ಗಿಹಳ್ಳಿ ಮತ್ತಿತರರು ಇದ್ದರು.