ಸೋಮವಾರಪೇಟೆ, ಮಾ. 23: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮತ್ತು ಬಜೆಗುಂಡಿ ಗ್ರಾಮದ ಪಾಂಚಜನ್ಯ ಯುವ ಸೇನೆಯ ವತಿಯಿಂದ ಬಜೆಗುಂಡಿಯ ಸಮುದಾಯ ಭವನದಲ್ಲಿ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಿ.ಡಿ. ಮಂಜುನಾಥ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಸ್ವಸಹಾಯ ಸಂಘದ ಸದಸ್ಯರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಡಿಸಿಸಿ ಬ್ಯಾಂಕ್‍ನಿಂದ ದೊರಕುವ ಬಡ್ಡಿ ರಹಿತ ಸಾಲವನ್ನು ಪಡೆದುಕೊಂಡು ತಮ್ಮ ಆರ್ಥಿಕ ಮಟ್ಟ ಸುಧಾರಣೆಗೆ ಬಳಸಿಕೊಳ್ಳಬೇಕು ಎಂದರು. ಡಿಸಿಸಿ ಬ್ಯಾಂಕ್ ನೋಡಲ್ ಅಧಿಕಾರಿ ಟಿ.ಎಸ್. ತುಂಗರಾಜು ಮಾತನಾಡಿ, ಮಹಿಳಾ ಸ್ವಸಹಾಯ ಸಂಘಗಳಿಗೆ ಶೇಕಡ ಶೂನ್ಯ ಬಡ್ಡಿಯಲ್ಲಿ ಹಾಗೂ ಪುರುಷ ಸ್ವಸಹಾಯ ಸಂಘಗಳಿಗೆ ಶೇ. 4 ರ ಬಡ್ಡಿ ದರದಲ್ಲಿ ಸಾಲ ವಿತರಿಸಲಾಗುವದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಂಚಜನ್ಯ ಯುವ ವೇದಿಕೆ ಅಧ್ಯಕ್ಷ ಪ್ರಶಾಂತ್ ವಹಿಸಿದ್ದರು. ವೇದಿಕೆಯಲ್ಲಿ ಗ್ರಾ.ಪಂ. ಸದಸ್ಯರಾದ ಹರೀಶ್, ಯೋಗೇಂದ್ರ, ಜಿ.ಪಂ. ಮಾಜಿ ಅಧ್ಯಕ್ಷ ಬಿ. ಶಿವಪ್ಪ ಅವರುಗಳು ಉಪಸ್ಥಿತರಿದ್ದರು.