ಮಡಿಕೇರಿ, ಮಾ. 31: ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್ ಕಾರ್ಯ ಚಟುವಟಿಕೆ ಕುರಿತು ಸೆಕ್ಟರ್ ಅಧಿಕಾರಿಗಳಿಗೆ ಮಾಹಿತಿ ನೀಡುವ ಕಾರ್ಯಕ್ರಮವು ನಗರದ ಜಿಲ್ಲಾಧಿಕಾರಿ ಕಚೇರಿ ಸಂಭಾಂಗಣದಲ್ಲಿ ಶನಿವಾರ ನಡೆಯಿತು.

ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಮಾತನಾಡಿ ವಿಧಾನಸಭಾ ಚುನಾವಣೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 41 ಸೆಕ್ಟರ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಸೆಕ್ಟರ್ ಅಧಿಕಾರಿಗಳು ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್ ಬಗ್ಗೆ ಮಾಹಿತಿ ಪಡೆದು ತಮ್ಮ ವ್ಯಾಪ್ತಿಯ ಮತದಾರರಿಗೆ ಜಾಗೃತಿ ಮೂಡಿಸಬೇಕಿದೆ ಎಂದು ನಿರ್ದೇಶನ ನೀಡಿದರು.

ಸೆಕ್ಟರ್ ಅಧಿಕಾರಿಗಳು ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಸಹ ಬಳಸಿಕೊಳ್ಳಬಹುದಾಗಿದೆ. ಆ ದಿಸೆಯಲ್ಲಿ ಜಿ.ಪಂ. ಸಿಇಒ ಅವರ ಸಹಕಾರ ಪಡೆಯಬಹುದಾಗಿದೆ ಎಂದು ತಿಳಿಸಿದರು.

ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್ ಕಾರ್ಯನಿರ್ವಹಣೆ ಬಗ್ಗೆ ಹಾಡಿಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ. ಆ ನಿಟ್ಟಿನಲ್ಲಿ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ. ಸತೀಶ್ ಕುಮಾರ್ ಮಾತನಾಡಿ ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲನೆ, ರ್ಯಾಂಡಮೈಸ್ (ಸಮ್ಮಿಶ್ರಣ), ಅಣಕು ಮತದಾನ, ಬ್ಯಾಲೆಟ್ ಪೇಪರ್ ಮತ್ತಿತರ ಬಗ್ಗೆ ಮಾಹಿತಿ ನೀಡಿದರು.

ಸೆಕ್ಟರ್ ಅಧಿಕಾರಿಗಳು ಗ್ರಾಮ ಪಂಚಾಯತ್, ಹೋಬಳಿ ಮಟ್ಟದಲ್ಲಿ ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್ ಕಾರ್ಯ ಚಟುವಟಿಕೆ ಬಗ್ಗೆ ಅರಿವು ಮೂಡಿಸಬೇಕು. ಆದ್ದರಿಂದ ಈ ಬಗ್ಗೆ ಸಮರ್ಪಕ ಮಾಹಿತಿ ಪಡೆಯುವಂತಾಗಬೇಕು ಎಂದರು.

ಜಿ.ಪಂ. ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಅವರು ವಿಧಾನಸಭಾ ಚುನಾವಣೆ ಸಂಬಂಧಿಸಿದಂತೆ ಸೆಕ್ಟರ್ ಅಧಿಕಾರಿಗಳ ಕರ್ತವ್ಯ ಬಗ್ಗೆ ಹಲವು ಸಲಹೆ, ಸೂಚನೆ ನೀಡಿದರು. ಸೆಕ್ಟರ್ ಅಧಿಕಾರಿಗಳು ಇದ್ದರು.