ಸೋಮವಾರಪೇಟೆ, ಮೇ 20: ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಬೇಸಿಗೆ ಶಿಬಿರಗಳು ಹೆಚ್ಚಿನ ಅನುಕೂಲವಾಗಿವೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಬಿ.ಸಿ. ಚಿಟ್ಟಿಯಪ್ಪ ಹೇಳಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಬೆಂಗಳೂರಿನ ಬಾಲ ಭವನ ಸಮಿತಿ ಆಶ್ರಯದಲ್ಲಿ ಇಲ್ಲಿನ ಸ್ತ್ರೀ ಶಕ್ತಿ ಭವನದಲ್ಲಿ ಕಳೆದ ಹತ್ತು ದಿನಗಳ ಕಾಲ ನಡೆದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೇವಲ ಶಿಕ್ಷಣದಿಂದ ಮಾತ್ರ ಯಾವದೇ ಸಾಧನೆ ಮಾಡಲು ಸಾಧ್ಯವಿಲ್ಲ. ಪಠ್ಯೇತರ ಚಟುವಟಿಕೆ, ಕ್ರೀಡೆ ಎಲ್ಲ ವಿದ್ಯಾರ್ಥಿಗಳಿಗೆ ಅತ್ಯವಶ್ಯಕವಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಸಹಕರಿಸಬೇಕು. ಮಕ್ಕಳ ಅಭಿರುಚಿಗೆ ತಕ್ಕಂತೆ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಮುಂದಾಗಬೇಕೆಂದರು. ಕೆಲವು ಮಕ್ಕಳಿಗೆ ಖಾಸಗಿ ಶಿಬಿರಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವದಿಲ್ಲ. ಪ್ರತಿಭೆ ಇದ್ದರೂ ಅವಕಾಶ ವಂಚಿತರಾಗುತ್ತಾರೆ. ಈ ನಿಟ್ಟಿನಲ್ಲಿ ಮಕ್ಕಳಲ್ಲಿರುವ ಸುಪ್ತ ಪ್ರತಿಭೆ, ಸೃಜನ ಶೀಲತೆಯನ್ನು ಹೊರತರಲು ಇಲಾಖೆಯು ಉಚಿತವಾಗಿ ಬೇಸಿಗೆ ಶಿಬಿರವನ್ನು ನಡೆಸುತ್ತಿದೆ. ಇದರ ಪ್ರಯೋಜನವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ಸಮಾಜ ಕಲ್ಯಾಣ ಇಲಾಖಾಧಿಕಾರಿ ಚಿಕ್ಕಬಸವಯ್ಯ ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾದ ರಮೇಶ್, ಇಲಾಖೆ ಮೇಲ್ವಿಚಾರಕಿ ಶೀಲಾ, ನಿವೃತ್ತ ಅಧಿಕಾರಿ ಶೈಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.