ಸೋಮವಾರಪೇಟೆ,ಮೇ.21: ಜಿಲ್ಲಾ ಆದಿದ್ರಾವಿಡ ಸಮಾಜದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಸ್ಮರಣೆ ಮತ್ತು ವಾರ್ಷಿಕ ಸಭೆ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ನೂರಾರು ಸಂಖ್ಯೆಯಲ್ಲಿದ್ದ ಸಮಾಜದ ಸದಸ್ಯರು ಪಟ್ಟಣದಲ್ಲಿ ಮೆರವಣಿಗೆ ನಡೆಸಿದರು. ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆಯೊಂದಿಗೆ ಜಯಘೋಷ ಮೊಳಗಿಸಿದರು.

ಇಲ್ಲಿನ ವಿವೇಕಾನಂದ ವೃತ್ತದಿಂದ ಮಡಿಕೇರಿ ರಸ್ತೆ, ಸಿ.ಕೆ. ಸುಬ್ಬಯ್ಯ ರಸ್ತೆ, ತ್ಯಾಗರಾಜ ರಸ್ತೆ, ಬಸವೇಶ್ವರ ರಸ್ತೆ ಮೂಲಕ ತೆರಳಿ ಬಾಣಾವರ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಕ್ಲಬ್ ರಸ್ತೆ ಮೂಲಕ ಒಕ್ಕಲಿಗರ ಸಮುದಾಯ ಭವನದವರೆಗೆ ಮೆರವಣಿಗೆಯಲ್ಲಿ ತೆರಳಿದರು.

ಕೊಡಗು ಜಿಲ್ಲಾ ಆದಿ ದ್ರಾವಿಡ ಸಮಾಜದ ಅಧ್ಯಕ್ಷ ಹೆಚ್.ಎಂ. ಸೋಮಪ್ಪ, ಹೋಬಳಿ ಘಟಕದ ಅಧ್ಯಕ್ಷ ಪ್ರಕಾಶ್ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು, ಸಮಾಜ ಬಾಂಧವರು ಭಾಗವಹಿಸಿದ್ದರು.