ಸೋಮವಾರಪೇಟೆ,ಮೇ.21: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.ಕಳೆದ ತಾ. 13.05.2009ರಂದು ಸಮೀಪದ ವಳಗುಂದ ಗ್ರಾಮದಲ್ಲಿ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಆರೋಪಿ ವಳಗುಂದ ಗ್ರಾಮದ ಅಪ್ಪಣ್ಣ ಎಂಬವರ ಪುತ್ರ ಉತ್ತಪ್ಪ ಇದುವರೆಗೂ ತಲೆ ಮರೆಸಿಕೊಂಡಿದ್ದು, ಇಂದು ಆರೋಪಿಯ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ವಳಗುಂದ ಗ್ರಾಮಕ್ಕೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಕುಡಿಯುವ ನೀರಿನ ಸಂಪರ್ಕಕ್ಕಾಗಿ ಪೈಪ್ ಲೈನ್ ಅಳವಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಉತ್ತಪ್ಪ, ಅದೇ ಗ್ರಾಮದ ಕೊಮಾರಪ್ಪ ಎಂಬವರ ಪತ್ನಿ ಎಂ.ಕೆ. ಮೋಹಿನಿ ಅವರ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದರು. ಈ ಬಗ್ಗೆ ಸೋಮವಾರಪೇಟೆ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ.ಪೊಲೀಸ್ ಠಾಣಾಧಿಕಾರಿ ಎಂ. ಶಿವಣ್ಣ, ಪೇದೆಗಳಾದ ಕುಮಾರ, ರಮೇಶ್, ಪ್ರವೀಣ್ ಅವರುಗಳು ಆರೋಪಿಯನ್ನು ಬಂಧಿಸಿ, ನ್ಯಾಯಾಧೀಶರ ಎದುರು ಹಾಜರುಪಡಿಸಿದ ಹಿನ್ನೆಲೆ, ಮುಂದಿನ 15 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.