ಮಡಿಕೇರಿ, ಮೇ. 23 : ರಾಜ್ಯದ ಶೇ.80 ರಷ್ಟು ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಪರವಾಗಿ ಮತದಾನ ಮಾಡಿದ್ದು, ಮೈತ್ರಿ ಸರ್ಕಾರ ರಚನೆಯ ಸಂದರ್ಭ ಅಲ್ಪಸಂಖ್ಯಾತ ನಾಯಕರೊಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಎ.ಯಾಕುಬ್ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ಕಳೆದ ಅನೇಕ ವರ್ಷಗಳಿಂದ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಈ ಬಾರಿಯಾದರೂ ಉಪಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಅಲ್ಪಸಂಖ್ಯಾತ ಮತದಾರರಿಗೆ ನ್ಯಾಯ ಒದಗಿಸಬೇಕೆಂದು ಕೆಪಿಸಿಸಿಗೆ ಮನವಿ ಮಾಡುವದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗುತ್ತಿದ್ದು, ಇದು ಜಾತ್ಯತೀತ ನೆಲೆಗಟ್ಟಿನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಿಕ್ಕ ಜಯವಾಗಿದೆ ಎಂದು ಯಾಕುಬ್ ಅಭಿಪ್ರಾಯಪಟ್ಟಿದ್ದಾರೆ.