ಸೋಮವಾರಪೇಟೆ, ಮೇ. 23: ಮಕ್ಕಳ ಸಂಖ್ಯೆಯ ನೆಪವೊಡ್ಡಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾದರೆ ಕಾನೂನಿನ ಮೊರೆ ಹೋಗಲಾಗುವದು ಎಂದು ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಟಿ.ಜೆ. ಗಣೇಶ್‍ಕುಮಾರ್ ಎಚ್ಚರಿಸಿದರು.

ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಬೇಕಾದ ಶಿಕ್ಷಣ ಇಲಾಖೆಯ ಕೆಲ ಅಧಿಕಾರಿಗಳು ಖಾಸಗಿ ಶಾಲೆಗಳಿಗೆ ಅನುಮತಿ ನೀಡುತ್ತಿರುವದರಿಂದ ಸರ್ಕಾರಿ ಕನ್ನಡ ಶಾಲೆಗಳು ಮುಚ್ಚುತ್ತಿವೆ ಎಂದು ಆರೋಪಿಸಿದರು.

ಸರ್ಕಾರದ ಆದೇಶ ಉಲ್ಲಂಘಿಸಿ ಕೊಡಗು ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳು ಗಣನೀಯವಾಗಿ ಮುಚ್ಚುತ್ತಿರುವದು ಶಿಕ್ಷಣ ಇಲಾಖೆಯ ಅಂಕಿ ಅಂಶಗಳಿಂದ ತಿಳಿದು ಬಂದಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಖಾಸಗಿ ಶಾಲೆಯ ಮಾಲೀಕರೊಂದಿಗೆ ಶಾಮೀಲಾಗುತ್ತಿದ್ದಾರೆ. ಇದರಿಂದ ಗ್ರಾಮಾಂತರ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಪೋಷಕರು ತಮ್ಮ ಮಕ್ಕಳನ್ನು ಪಟ್ಟಣದ ಖಾಸಗಿ ಶಾಲೆಗಳಿಗೆ ಕಳುಹಿಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ವಿವರಿಸಿದರು.

ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣದೊಂದಿಗೆ ಸಮವಸ್ತ್ರ, ಪುಸ್ತಕ, ಕಾಲುಚೀಲ, ಬೆಳಗ್ಗಿನ ಹಾಲು, ಮಧ್ಯಾಹ್ನದ ಬಿಸಿ ಊಟ ಸೇರಿದಂತೆ ಇನ್ನಿತರ ಸವಲತ್ತುಗಳು ದೊರಕುತ್ತಿದ್ದರೂ ಖಾಸಗಿ ಶಾಲೆಗಳು ಹೆಚ್ಚುತ್ತಿರುವದರಿಂದ ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿಗೆ ಬಂದಿದೆ. ಇದಕ್ಕೆ ಕಡಿವಾಣ ಹಾಕಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಬೇಕಾಗಿದೆ ಎಂದರು.

ಸಂಸ್ಥೆಯ ತಾಲೂಕು ಘಟಕದ ಅಧ್ಯಕ್ಷ ಪಿ. ಮಧು ಮಾತನಾಡಿ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಸಮಸ್ಯೆ ತಾಂಡವವಾಡುತ್ತಿದೆ. ಪ್ಲಾಸ್ಟಿಕ್ ನಿಷೇಧ ಜಾರಿಯಲ್ಲಿದ್ದರೂ, ಹಲವಾರು ಅಂಗಡಿಗಳಲ್ಲಿ ಪ್ಲಾಸ್ಟಿಕ್ ಲೋಟ, ಬಾಟಲಿಗಳು, ಕೈಚೀಲಗಳು ದೊರೆಯುತ್ತವೆ. ಅಭಿವೃದ್ಧಿಯತ್ತ ಗಮನಹರಿಸಬೇಕಾದ ಪಂಚಾಯಿತಿ ಕೌನ್ಸಿಲರ್‍ಗಳು ನಿಷ್ಕ್ರೀಯರಾಗಿದ್ದಾರೆ. ಜಿಲ್ಲಾಧಿಕಾರಿಗಳಿಗೂ ಪುಕಾರು ನೀಡಿದ್ದರೂ ಯಾವದೇ ಕ್ರಮಕೈಗೊಂಡಿಲ್ಲ. ಪಟ್ಟಣದಲ್ಲಿ ವಾಹನ ನಿಲುಗಡೆ ಸಮಸ್ಯೆ ಬಿಗಡಾಯಿಸಿದೆ. ಸಂಚಾರ ವ್ಯವಸ್ಥೆಯನ್ನು ಸರಿಪಡಿಸಲು ಸಂಚಾರಿ ಪೊಲೀಸ್ ನೇಮಕವಾಗಬೇಕಿದೆ ಎಂದರು.

ಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ಸೂಫಿ, ತಾಲೂಕು ಸ.ಕಾರ್ಯದರ್ಶಿ ಪ್ರವೀಣ್ ಉಪಸ್ಥಿತರಿದ್ದರು.