ಮಡಿಕೇರಿ, ಜೂ. 3: ತಾ. 5 ರಂದು ನಡೆಯುವ ವಿಶ್ವ ಪರಿಸರ ದಿನಾಚರಣೆಗೆ ವಿವಿಧ ಹೊಟೇಲ್, ಹೋಂ ಸ್ಟೇ ಮಾಲೀಕರು ಹಾಗೂ ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಮನವಿ ಮಾಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೊಟೇಲ್, ಹೋಂ ಸ್ಟೇ ಮಾಲೀಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳ ಜೊತೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪ್ರವಾಸಿಗರಲ್ಲಿ ಅರಿವು ಮೂಡಿಸಬೇಕಿದೆ. ಆ ದಿಸೆಯಲ್ಲಿ ತಮ್ಮ ಹೊಟೇಲ್ ಹಾಗೂ ಹೋಂ ಸ್ಟೇಗಳಲ್ಲಿ ನಾಮಫಲಕ ಅಳವಡಿಸುವದರ ಜೊತೆಗೆ ಕಸದ ತೊಟ್ಟಿಗಳನ್ನು ಇಡುವಂತಾಗಬೇಕು ಎಂದು ಸಲಹೆ ಮಾಡಿದರು.
ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ತಾ. 5 ರಿಂದ ಒಂದು ವಾರಗಳ ಕಾಲ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅರಣ್ಯ, ಪರಿಸರ, ಪ್ರವಾಸೋದ್ಯಮ ಹಾಗೂ ವಿವಿಧ ಇಲಾಖೆಗಳೊಂದಿಗೆ ಕೈಜೋಡಿಸಿ ವಿಶ್ವ ಪರಿಸರ ದಿನಾಚರಣೆ ಯಶಸ್ಸಿಗೆ ಸಹಕರಿಸುವಂತೆ ಕೋರಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್ ಮಾತನಾಡಿ, ಪರಿಸರ ಮತ್ತು ಆರೋಗ್ಯ ಒಂದಕ್ಕೊಂದು ಅವಿನಾಭಾವ ಸಂಬಂಧವಿದ್ದು, ಪರಿಸರ ಉಳಿದಲ್ಲಿ, ಆರೋಗ್ಯವೂ ಉತ್ತಮವಾಗಿರುತ್ತದೆ. ಆದ್ದರಿಂದ ಪರಿಸರ ಸಂರಕ್ಷಣೆ ಬಗ್ಗೆ ಪ್ರವಾಸಿಗರಲ್ಲಿ ಅರಿವು ಮೂಡಿಸಬೇಕಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ ಸಂಬಂಧಿಸಿದಂತೆ ಜಾಗೃತಿ ಇದೆ, ಆದರೂ ಇನ್ನಷ್ಟು ಅರಿವು ಮೂಡಿಸುವದು ಅಗತ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಪರಿಸರ ಅಧಿಕಾರಿ ಜಿ.ಆರ್. ಗಣೇಶನ್ ಮಾತನಾಡಿ, ತಾ. 5 ರಂದು ಬೆಳಿಗ್ಗೆ 7 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ರಾಜಾಸೀಟುವರೆಗೆ ವಾಕಥಾನ್ ಏರ್ಪಡಿಸಲಾಗಿದೆ. ಬೆಳಿಗ್ಗೆ 9 ಗಂಟೆಗೆ ನಗರದ ಜೂನಿಯರ್ ಕಾಲೇಜಿನಿಂದ ಕಾವೇರಿ ಕಲಾಕ್ಷೇತ್ರದವರೆಗೆ ಮ್ಯಾರಥಾನ್ ನಡೆಯಲಿದ್ದು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳುವಂತೆ ಅವರು ಕೋರಿದರು.
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ನಡೆಯಲಿದ್ದು, ಬಹುಮಾನ ವಿತರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ರಾಜ್ಯ ವಿಜ್ಞಾನ ಪರಿಷತ್ತಿನ ಟಿ.ಜಿ.ಪ್ರೇಮಕುಮಾರ್, ಕೂರ್ಗ್ ಹೋಂ ಸ್ಟೇ ಅಸೋಸಿಯೇಷನ್ ಅಧ್ಯಕ್ಷ ಚಂಗಪ್ಪ, ಮಾಜಿ ಅಧ್ಯಕ್ಷ ಕರುಂಬಯ್ಯ, ಮೋಹನ್ ದಾಸ್, ಎಸ್‍ಎಲ್‍ಎನ್ ಸಮೂಹದ ಸೋಮಯ್ಯ, ಜಹೀರ್ ಅಹ್ಮದ್, ಮಹಮದ್ ಆಸಿಫ್, ರವಿಕುಮಾರ್, ತಾಜ್, ಆರೆಂಜ್ ಕೌಂಟಿ, ಕ್ಲಬ್ ಮಹೀಂದ್ರ ಹೀಗೆ ನಾನಾ ಹೊಟೇಲ್ ಹಾಗೂ ಹೋಂ ಸ್ಟೇ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದು, ಪ್ಲಾಸ್ಟಿಕ್ ನಿಷೇಧ ಸಂಬಂಧ ಹಲವು ಮಾಹಿತಿ ನೀಡಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್, ಎಂ.ಎಂ.ಜಯ, ಪೌರಾಯುಕ್ತೆ ಬಿ.ಶುಭಾ, ಪ್ರವಾಸೋದ್ಯಮ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ, ಸಹಾಯಕ ನಿರ್ದೇಶಕ ಜಗನ್ನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಇತರರು ಇದ್ದರು.
ಉದ್ಘಾಟನೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಅರಣ್ಯ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ತಾ. 5 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಹಸಿರು ಶಿಷ್ಟಾಚಾರ ಕೃತಿ ಬಿಡುಗಡೆ ಮಾಡಲಿದ್ದಾರೆ. ಜಿಲ್ಲಾ ಪರಿಸರ ಅಧಿಕಾರಿ ಜಿ.ಆರ್. ಗಣೇಶನ್ ಆಶಯ ಭಾಷಣ ಮಾಡಲಿದ್ದಾರೆ.
ಜಿ.ಪಂ.ಸಿಇಓ ಪ್ರಶಾಂತ್ ಕುಮಾರ್ ಮಿಶ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎಂ.ಎಲ್. ಮಂಜುನಾಥ್, ಎಂ.ಎಂ. ಜಯ, ಪೌರಾಯುಕ್ತೆ ಬಿ. ಶುಭಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ. ಕೆಂಚಪ್ಪ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಉಪಾಧ್ಯಕ್ಷ ಕೆ.ಟಿ. ಬೇಬಿ.ಮ್ಯಾಥ್ಯೂ, ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಫಿಲಿಪ್ ವಾಸ್, ಅರಣ್ಯ, ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಇತರರು ಪಾಲ್ಗೊಳ್ಳಲಿದ್ದಾರೆ.
ಸಭಾ ಕಾರ್ಯಕ್ರಮಕ್ಕೂ ಮೊದಲು ಬೆಳಿಗ್ಗೆ 7 ಗಂಟೆಗೆ ಕಾಲ್ನಡಿಗೆ ಜಾಥಾಗೆ (ವಾಕಥಾನ್), ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಚಾಲನೆ ನೀಡಲಿದ್ದಾರೆ. 9 ಗಂಟೆಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಕಾಡ್ಲೂರು ಸತ್ಯನಾರಾಯಣಾಚಾರ್ಯ ಸಸಿ ನೆಡುವ ಹಾಗೂ ಪರಿಸರ ಜಾಥಾಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಚಾಲನೆ ನೀಡಲಿದ್ದಾರೆ.