ಮಡಿಕೇರಿ, ಜೂ. 14: ಮಡಿಕೇರಿ ನಗರದ ಮಳೆಹಾನಿ ಪ್ರದೇಶಗಳಿಗೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು.

ನಗರದ ಚಾಮುಂಡೇಶ್ವರಿ ನಗರ, ಮಂಗಳಾದೇವಿ ನಗರ, ದೇಚೂರು ಮತ್ತಿತರ ಕಡೆಗಳಿಗೆ ಭೇಟಿ ನೀಡಿ ಮಳೆಯಿಂದ ಉಂಟಾಗಿರುವ ಭೂ ಕುಸಿತ, ಮನೆ ಹಾನಿ, ರಸ್ತೆ ಬದಿಗೆ ಮರಗಳು ಬಿದ್ದಿರುವದನ್ನು ಪರಿಶೀಲಿಸಿದರು.

ಬಳಿಕ ಮಾತನಾಡಿದ ಶಾಸಕರು ಮಹಾ ಮಳೆಯಿಂದ ರಸ್ತೆ ಬದಿಗೆ ಉರುಳಿ ಬಿದ್ದಿರುವ ಮರ ಹಾಗೂ ಮಣ್ಣನ್ನು ಕೂಡಲೇ ತೆರವುಗೊಳಿಸು ವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆಲವು ಕಡೆಗಳಲ್ಲಿ ಕಟ್ಟಡ ಬಳಿ ಭೂ ಕುಸಿದಿದ್ದು, ಇದರಿಂದ ಕಟ್ಟಡಗಳಿಗೆ ಹಾನಿಯಾಗುತ್ತಿದೆ. ಇಂತಹವನ್ನು ಪರಿಶೀಲಿಸಿ ತಡೆಗೋಡೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಕಳೆದ 10 ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಬೆಳೆ ಹಾನಿ ಹಾಗೂ ವಾಸದ ಮನೆ ಹಾನಿಯಾಗಿದೆ. ರಸ್ತೆ ಹದಗೆಟ್ಟಿದೆ. ಮಳೆಯಿಂದ ಸುಮಾರು 100 ಕೋಟಿ ರೂ. ನಷ್ಟ ಉಂಟಾಗಿದ್ದು, ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಮಳೆಹಾನಿ ಸಂಬಂಧ ಜಿಲ್ಲಾಡಳಿತ ನಿಖರ ಅಂಕಿ-ಅಂಶಗಳನ್ನು ಒಳಗೊಂಡ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಆ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆದು ಮಳೆಹಾನಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಲು ಇಬ್ಬರು ಶಾಸಕರು ಪ್ರಯತ್ನಿಸ ಲಾಗುವದು ಎಂದು ತಿಳಿಸಿದರು.

ಸೋಮವಾರಪೇಟೆ ಭಾಗದಲ್ಲಿ ಸಾಕಷ್ಟು ಬೆಳೆ ಹಾನಿಯಾಗಿದೆ. ಮಡಿಕೇರಿ ನಗರದಲ್ಲಿ 8 ಕ್ಕೂ ಹೆಚ್ಚು ಮನೆಗಳು ಜಖಂಗೊಂಡಿವೆ. ಧಾರಾಕಾರ ಮಳೆಯಿಂದ ಜಿಲ್ಲೆಯಾದ್ಯಂತ ಅಪಾರ ನಷ್ಟ ಉಂಟಾಗಿದ್ದು, ಸರ್ಕಾರ ತಕ್ಷಣವೇ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಶಾಸಕರು ಮನವಿ ಮಾಡಿದರು. ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ರಮೇಶ್, ಸದಸ್ಯರಾದ ಲಕ್ಷ್ಮಿ, ಅನಿತಾ ಪೂವಯ್ಯ, ಉನ್ನಿಕೃಷ್ಣ, ಪಿ.ಡಿ.ಪೊನ್ನಪ್ಪ ಇತರರು ಇದ್ದರು.

ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಪ್ರತಿ ವರ್ಷ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವದರಿಂದ ಡಾ.ನಂಜುಂಡಪ್ಪ ವರದಿಯಲ್ಲಿ ತಿಳಿಸಿರುವಂತೆ ಜಿಲ್ಲೆಗೆ ಪ್ರತ್ಯೇಕ ‘ರಸ್ತೆ ಅಭಿವೃದ್ಧಿ ನಿಧಿ’ ಸ್ಥಾಪಿಸಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಹೇಳಿದರು.

ಕಳೆದ ಒಂದು ವಾರದಿಂದ ಸುರಿದ ಮಳೆಗೆ ಸಾಕಷ್ಟು ಬೆಳೆ ಹಾನಿಯಾಗಿದ್ದು, ಜಿಲ್ಲಾಡಳಿತ ಕೂಡಲೇ ಈ ಸಂಬಂಧ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಆ ನಿಟ್ಟಿನಲ್ಲಿ ಅನುದಾನ ಬಿಡುಗಡೆಗೆ ಪ್ರಯತ್ನಿಸ ಲಾಗುವದು ಎಂದು ಕೆ.ಜಿ.ಬೋಪಯ್ಯ ಅವರು ಪತ್ರಿಕಾ ಭವನದಲ್ಲಿ ಪಾಲ್ಗೊಂಡಿದ್ದ ಸಂವಾದ ಸಂದರ್ಭದಲ್ಲಿ ತಿಳಿಸಿದರು.