ಮಡಿಕೇರಿ, ಜು.6: ಸಫಾಯಿ ಕರ್ಮಚಾರಿಗಳು ನಗರ, ಪಟ್ಟಣ ಪ್ರದೇಶವನ್ನು ಶುಚಿಗೊಳಿಸುತ್ತಾರೆ. ಆ ನಿಟ್ಟಿನಲ್ಲಿ ಪೌರಕಾರ್ಮಿಕರ ಬದುಕು ಸಹ ಸುಂದರವಾಗಿರಬೇಕು ಎಂದು ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್ ಸಲಹೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಸಫಾಯಿ ಕರ್ಮಚಾರಿ, ಮ್ಯಾನುಯಲ್ ಸ್ಕ್ಯಾವೆಂಜರ್ಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಸಂಬಂಧ ಇರುವ ಕಾನೂನುಗಳು, ಸರ್ಕಾರದ ಸೌಲಭ್ಯಗಳ ಅರಿವು ಮೂಡಿಸುವ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿದಿನ ಬೆಳ್ಳಂಬೆಳಗ್ಗೆ ನಗರ ಪಟ್ಟಣ ಪ್ರದೇಶಗಳನ್ನು ಶುಚಿಗೊಳಿಸಿ ಸುಂದರವಾಗಿ ಕಾಣುವಂತೆ ಮಾಡುತ್ತಾರೆ. ಆದರೆ ತಮ್ಮ ಆರೋಗ್ಯದ ಬಗ್ಗೆ ಗಮನಹರಿಸುವದಿಲ್ಲ. ಆದ್ದರಿಂದ ತಮ್ಮ ವೈಯಕ್ತಿಕ ಬದುಕಿನ ಕಡೆಗೂ ಆದ್ಯತೆ ನೀಡಬೇಕು ಎಂದು ಅವರು ಸಲಹೆ ಮಾಡಿದರು.
ನಗರಸಭೆ ಅಧ್ಯಕ್ಷೆÀ ಕಾವೇರಮ್ಮ ಸೋಮಣ್ಣ ಮಾತನಾಡಿ ಪೌರ ಕಾರ್ಮಿಕರು ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಾರೆ. ಇವರ ಸೇವೆಯಿಂದ ನಗರ, ಪಟ್ಟಣಗಳು ಶುಚಿಯಾಗಿ ಕಾಣುತ್ತವೆ. ಆ ನಿಟ್ಟಿನಲ್ಲಿ ಪೌರ ಕಾರ್ಮಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವತ್ತ ಆಸಕ್ತಿವಹಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಮಾತನಾಡಿ ಪೌರಕಾರ್ಮಿಕರು ಇತರರಂತೆ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದರು. ಸಮಾಜ ಚೆನ್ನಾಗಿರಬೇಕಾದರೆ ಪೌರಕಾರ್ಮಿಕರು ಸಹ ಉತ್ತಮ ಜೀವನ ನಡೆಸಬೇಕು. ಪೌರಕಾರ್ಮಿಕರಿಗೆ ನಿವೇಶನ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ ಎಂದು ಜಿಲ್ಲಾಧಿಕಾರಿ ಇದೇ ಸಂದರ್ಭ ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ ಪೌರಕಾರ್ಮಿಕರಿಗೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ತಲುಪಬೇಕು. ಇದರಿಂದ ಪೌರಕಾರ್ಮಿಕರು ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಅವರು ಹೇಳಿದರು. ಜಿ.ಪಂ.ಸಿಇಓ ಪ್ರಶಾಂತ್ ಕುಮಾರ್ ಮಿಶ್ರ ಮಾತನಾಡಿ ಪೌರ ಕಾರ್ಮಿಕರಿಗೆ ಸರ್ಕಾರದಿಂದ ಹಲವು ಸವಲತ್ತುಗಳಿದ್ದು, ಅವುಗಳನ್ನು ಪಡೆದುಕೊಳ್ಳುವಂತಾಗಬೇಕು. ಎಂದುತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಪೌರಕಾರ್ಮಿಕರು ತಮ್ಮ ಬದುಕು ಉತ್ತಮಪಡಿಸಿಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.
ವಕೀಲ ಕುಂಞ ಅಬ್ದುಲ್ಲಾ ಮಾತನಾಡಿ ಪೌರಕಾರ್ಮಿಕರು ಕರ್ತವ್ಯ ನಿರ್ವಹಿಸಲು ಅಗತ್ಯ ಸಲಕರಣೆಗಳನ್ನು ನೀಡಬೇಕು. ಎಂದು ಹೇಳಿದರು. ನಗರಸಭಾ ಸzಸ್ಯೆ ಅನಿತಾ ಪೂವಯ್ಯ ಅವರು ಮಾತನಾಡಿ ಪೌರಕಾರ್ಮಿಕರು ಶುಚಿತ್ವಕ್ಕೆ ಒತ್ತು ನೀಡಬೇಕು ಎಂದರು. ಜಿ.ಪಂ.ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಗೋಪಾಲಕೃಷ್ಣ, ಪೌರಾಯುಕ್ತೆ ಬಿ.ಶುಭ, ನಗರಾಭಿವೃದ್ಧಿ ಕೋಶದ ಎಇಇ ಸ್ವಾಮಿ ಇತರರು ಇದ್ದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಾಯಾದೇವಿ ಗಲಗಲಿ ಸ್ವಾಗತಿಸಿದರು. ಪದವಿ ಪೂರ್ವ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ನಿರೂಪಿಸಿ, ವಂದಿಸಿದರು.