ಮಡಿಕೇರಿ, ಜು. 28: ರಾಷ್ಟ್ರೀಯ ಬಾಲಸ್ವಾಸ್ಥ್ಯ ಯೋಜನೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಿ ಬಾಲಾವ್ಯವಸ್ಥೆಯಲ್ಲೇ ಮಕ್ಕಳ ಆರೋಗ್ಯ ಸುಧಾರಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಾಲ ಕಾಲಕ್ಕೆ ಕಡ್ಡಾಯ ಆರೋಗ್ಯ ತಪಾಸಣೆ ಮಾಡಬೇಕು. ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಕಾರ್ಯನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ತಿಂಗಳಲ್ಲಿ ನಾಲ್ಕು ದಿನ ಮಕ್ಕಳ ತಜ್ಞರು ಜಿಲ್ಲೆಯಲ್ಲಿ ಇರುವ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲು ಹಾಗೂ ಆಶ್ರಮ ಶಾಲೆ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ಕಾಲ ಕಾಲಕ್ಕೆ ಆರೋಗ್ಯ ಶಿಬಿರವನ್ನು ಆಯೋಜಿಸಲು ಕ್ರಮ ವಹಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಂತುಹುಳು ನಿವಾರಣೆ ಅಭಿಯಾನದಡಿ 1 ರಿಂದ 19 ವರ್ಷ ವಯೋಮಾನದ ಮಕ್ಕಳಲ್ಲಿ ಇದುವರೆಗೂ ಶೇ. 98.7 ರಷ್ಟು ಪ್ರಗತಿ ಸಾಧಿಸಿರುವದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ ಮಾಹಿತಿ ನೀಡಿದರು.
ನೂತನವಾಗಿ ಜಾರಿಗೆ ಬಂದಿರುವ ಆರೋಗ್ಯ ಕರ್ನಾಟಕ ಯೋಜನೆಯ ಬಗ್ಗೆ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ ಅವರು ಈ ಯೋಜನೆಯಡಿ ಆದ್ಯತೆ ಮೇರೆಗೆ ಗಿರಿಜನರಿಗೆ ಇದರ ಬಗ್ಗೆ ಮಾಹಿತಿ ನೀಡಿ ಅದರ ಪ್ರಯೋಜನದ ಬಗ್ಗೆ ತಿಳಿಸಬೇಕೆಂದು ಎಲ್ಲಾ ಆರೋಗ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಎಲ್ಲಾ ತಾಲೂಕು ಆರೋಗ್ಯ ಅಧಿಕಾರಿಗಳು ಆಸ್ಪತ್ರೆಗಳಲ್ಲಿ ಸಮಯಕ್ಕೆ ಸರಿಯಾಗಿ ರೋಗಿಗಳಿಗೆ ಆಹಾರ ಪೂರೈಕೆ ಮಾಡುವದು ಆಸ್ಪತ್ರೆಯ ಸ್ವಚ್ಛತೆ, ನೌಕರರ ಹಾಜರಿ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಸರ್ಕಾರಿ ಆಸ್ಪತ್ರೆಗಳು ಇರುವದು ಬಡವರಿಗೆ ಎಂಬದನ್ನು ಅರಿತು ಕಾರ್ಯ ನಿರ್ವಹಿಸಬೇಕೆಂದು ತಾಕೀತು ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಅವರು ಇಂಧ್ರಧನುಷ್, ಮನೋಚಿಂತನ ಚಿಕಿತ್ಸಾಲಯ, ಲಕ್ಷ್ಯ ಕಾರ್ಯಕ್ರಮದ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಪ್ರವಾಹಕ್ಕೆ ತುತ್ತಾಗಿರುವ ಪ್ರದೇಶಗಳಲ್ಲಿ ಕುಡಿಯುವ ನೀರನ್ನು ಪರೀಕ್ಷಿಸಿ ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು.
ಶಾಲಾ ಆರೋಗ್ಯ ಶಿಕ್ಷಣ ತಂಡಗಳ ಕಾರ್ಯಗಳನ್ನು ಚುರುಕುಗೊಳಿಸುವಂತೆ ಜಿ.ಪಂ. ಸಿಇಓ ಪ್ರಶಾಂತ್ ಕುಮಾರ್ ಮಿಶ್ರ ಎಲ್ಲಾ ತಾಲೂಕು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಹಾಗೆಯೇ ಅಪೌಷ್ಟಿಕತೆ ಹಾಗೂ ಕಡಿಮೆ ತೂಕ ಹೊಂದಿರುವ ಮಕ್ಕಳ ಆರೈಕೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ ಸೂರ್ಗಿಹಳ್ಳಿ ಅವರಿಂದ ಮಾಹಿತಿ ಪಡೆದರು. ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹಾಗೂ ಉಪಕೇಂದ್ರಗಳಿಗೆ ಭೇಟಿ ನೀಡಿ ವರದಿ ನೀಡುವಂತೆ ತಾಕೀತು ಮಾಡಿದರು.
ಸಭೆಯಲ್ಲಿ ಜಿಲ್ಲಾ ಸರ್ಜನ್ ಡಾ. ಜಗದೀಶ್, ಐಟಿಡಿಪಿ ಅಧಿಕಾರಿ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ, ಆಹಾರ ಇಲಾಖೆಯ ಉಪ ನಿರ್ದೇಶಕ ಪುಟ್ಟಸ್ವಾಮಿ, ತಾಲೂಕು ವೈದ್ಯಾಧಿಕಾರಿಗಳು ಹಾಗೂ ಇತರರು ಇದ್ದರು.