ಮಡಿಕೇರಿ, ಆ. 2: ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಪೌರ ಸಭೆಗಳ ನಿಯಮಗಳು 1977ರ ನಿಯಮ 3(1)ರಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ದತ್ತವಾಗಿರುವ ಅಧಿಕಾರದ ಮೇರೆಗೆ 105 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಿಸಿ ಆದೇಶಿಸಿದೆ. ಅದರಂತೆ ಜಿಲ್ಲೆಯ ಮೂರು ಪಟ್ಟಣ ಪಂಚಾಯಿತಿಗಳಾದ ವೀರಾಜಪೇಟೆ, ಸೋಮವಾರಪೇಟೆ ಹಾಗೂ ಕುಶಾಲನಗರ ಪಟ್ಟಣ ಪಂಚಾಯಿತಿಗಳಿಗೆ ತಾ. 29 ರಂದು ಚುನಾವಣೆ ನಡೆಯಲಿದೆ.ಆಯೋಗದ ಆದೇಶದಂತೆ ತಾ. 10 ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದು, ತಾ. 17 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ತಾ. 18 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ತಾ.20 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದೆ. ಮತದಾನ ಅವಶ್ಯವಿದ್ದರೆ ತಾ. 29 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ಮಾಡಬಹುದಾಗಿದೆ. ಮರು ಮತದಾನ ಅವಶ್ಯಕತೆಯಿದ್ದಲ್ಲಿ ತಾ. 31 ರಂದು ನಡೆಸಬಹುದಾಗಿದೆ. ಸೆ. 1 ರಂದು ತಾಲೂಕು ಕೇಂದ್ರ ಸ್ಥಳದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಚುನಾವಣೆ ನಡೆಯುವ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಚುನಾವಣೆ ಘೋಷಣೆಯಾದ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ.