ಕುಶಾಲನಗರ, ಆ. 3: ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಸಮರ್ಪಕವಾಗಿ ಚಿಕಿತ್ಸೆ ಲಭ್ಯವಾಗುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ಶಿರಂಗಾಲದಲ್ಲಿ ವಾಹನ ಅಪಘಾತಕ್ಕೆ ಒಳಗಾದ ವಿದ್ಯಾರ್ಥಿಯೊಬ್ಬನನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕರೆತಂದ ಸಂದರ್ಭ ಸಕಾಲಕ್ಕೆ ಚಿಕಿತ್ಸೆ ಲಭ್ಯವಾಗಿಲ್ಲ ಎಂದು ಆರೋಪ ವ್ಯಕ್ತಪಡಿಸಿದ್ದಾರೆ.

ಓರ್ವ ಮಹಿಳಾ ವೈದ್ಯರನ್ನು ಹೊರತುಪಡಿಸಿ ಉಳಿದ ಯಾವದೇ ವೈದ್ಯರು ಸಮಯಕ್ಕೆ ಸರಿಯಾಗಿ ಆಸ್ಪತ್ರೆಯಲ್ಲಿ ಲಭ್ಯರಿಲ್ಲದ ಬಗ್ಗೆ ದೂರಿದ್ದಾರೆ. ಈ ಸಂದರ್ಭ ಆಸ್ಪತ್ರೆಗೆ ಭೇಟಿ ನೀಡಿದ ಕೊಡಗು ಜಿಪಂ ಮಾಜಿ ಅಧ್ಯಕ್ಷರು ಹಾಗೂ ಜೆಡಿಎಸ್‍ನ ಪರಿಶಿಷ್ಟ ಪಂಗಡದ ರಾಜ್ಯ ಉಪಾಧ್ಯಕ್ಷರಾದ ಎಸ್.ಎನ್.ರಾಜಾರಾವ್ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಕಿಡಿಕಾರಿದರು. ಕುಶಾಲನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ರೋಗಿಗಳಿಗೆ ಚಿಕಿತ್ಸೆ ನೀಡಬೇಕಾದ ಆಸ್ಪತ್ರೆ ಅತ್ಯಂತ ಹೀನಾಯ ಸ್ಥಿತಿಯಲ್ಲಿದೆ. ವೈದ್ಯರ ಕೊರತೆ, ಮೂಲಭೂತ ಸೌಕರ್ಯಗಳಿಂದ ಆಸ್ಪತ್ರೆ ನಲುಗುತ್ತಿದ್ದು ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಜಿಲ್ಲಾ ಆರೋಗ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕೂಡಲೆ ಆಸ್ಪತ್ರೆಗೆ ಸೂಕ್ತ ಕಾಯಕಲ್ಪ ನೀಡಿ ರೋಗಿಗಳಿಗೆ ಸಮರ್ಪಕ ಸೇವೆ ಒದಗಿಸಬೇಕಿದೆ ಎಂದು ತಾಕೀತು ಮಾಡಿದರು.