ಕುಶಾಲನಗರ, ಆ. 10: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಗೆ ಕಾಫಿ, ಮೆಣಸು, ಏಲಕ್ಕಿ ಸೇರಿದಂತೆ ವಿವಿಧ ಕೃಷಿ ಫಸಲು ನೆಲಕಚ್ಚಿದ್ದು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರ ಹಿತರಕ್ಷಣೆಗೆ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ತಾ.23 ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಪಟ್ಟಣದ ಎಪಿಸಿಎಂಎಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ.ಭಾರತೀಶ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿಣಿ ಸಭೆಯಲ್ಲಿ ರೈತ ಮೋರ್ಚಾದ ಅಧ್ಯಕ್ಷ ತಾಕೇರಿ ಪೊನ್ನಪ್ಪ ಮತ್ತು ರವಿಕಾಳಪ್ಪ ಮಾತ ನಾಡಿ, ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಅಪಾರ ಪ್ರಮಾಣದಲ್ಲಿ ಕಾಫಿ ಬೆಳೆ ಹಾನಿಯಾಗಿ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ರೈತರ ಹಿತಕಾಯಲು ಜನಪ್ರತಿನಿಧಿಗಳು ಹೋರಾಟ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಬೇಕಾಗಿದೆ ಎಂದು ಒತ್ತಾಯಿಸಿದರು.

ರೂ. 153 ಕೋಟಿ ಬಾಕಿ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಿ.ಡಿ.ಮಂಜುನಾಥ್ ಮಾತನಾಡಿ, ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ ಸಾಲಮನ್ನಾ ಯೋಜನೆಗೆ ಸರ್ಕಾರದಿಂದ ಯಾವದೇ ಹಣ ಬಿಡುಗಡೆಯಾಗಿಲ್ಲ. ಆದರೆ ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಡಿಸಿಸಿ ಬ್ಯಾಂಕ್ ಮೂಲಕ 128 ಕೋಟಿ ಹಾಗೂ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳಿಂದ 28 ಕೋಟಿ ಹಣವನ್ನು ರೈತರಿಗೆ ನೀಡಲಾಗಿದೆ. ಇದುವರೆಗೂ ಡಿಸಿಸಿ ಬ್ಯಾಂಕ್ ಗೆ ಸರ್ಕಾರದಿಂದ ಬರಬೇಕಾದ 153 ಕೋಟಿ ಹಣ ಬ್ಯಾಂಕ್ ಬಾಕಿಯಿದೆ ಎಂದು ಮಾಹಿತಿ ಒದಗಿಸಿದರು.

ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಮಾತನಾಡಿ, ಕೇಂದ್ರದಲ್ಲಿ ಸುಭದ್ರ ಸರ್ಕಾರ ಮತ್ತೆ ರಚನೆಯಾಗಬೇಕು. ಮತ್ತೆ ನರೇಂದ್ರ ಮೋದಿ ರಾಷ್ಟ್ರದ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಘಟಿತ ರಾಗುವ ಮೂಲಕ ಪಕ್ಷದ ಬಲವರ್ಧನೆಗೆ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಮಾಜಿ ಶಾಸಕ ಎಸ್.ಜಿ.ಮೇದಪ್ಪ ಮಾತನಾಡಿ, ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಯಾವದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂದು ಮನವಿ ಮಾಡಿದರು. ಅರಣ್ಯ ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಎಂ.ಬಿ.ದೇವಯ್ಯ, ಮುಖಂಡರಾದ ಕುಂದಲ್ಪಾಡಿ ನಾಗೇಶ್ ಹಾಗೂ ಮಡಿಕೇರಿ ಕ್ಷೇತ್ರದ ಅಧ್ಯಕ್ಷ ಎಂ.ಎನ್.ಕುಮಾರಪ್ಪ ಮಾತನಾಡಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಂತೆಯಂಡ ರವಿಕುಶಾಲಪ್ಪ, ರಾಬಿನ್ ದೇವಯ್ಯ, ವಿ.ಕೆ. ಲೋಕೇಶ್, ಮಹಿಳಾ ಘಟಕದ ಅಧ್ಯಕ್ಷೆ ಯಮುನಾ ಚಂಗಪ್ಪ, ಜಿಲ್ಲಾ ವಕ್ತಾರ ಅಭಿಮನ್ಯುಕುಮಾರ್, ಎಸ್‍ಸಿ ವಿಭಾಗದ ಜಿಲ್ಲಾಧ್ಯಕ್ಷ ಸತೀಶ್, ಮುಖಂಡರಾದ ವಿ.ಎನ್.ವಸಂತ್ ಕುಮಾರ್, ಜಿ.ಎಲ್.ನಾಗರಾಜು ಉಪಸ್ಥಿತರಿದ್ದರು. ಕಾರ್ಯದರ್ಶಿ ಬಾಲಚಂದ್ರ ಕಳಗಿ ಕಾರ್ಯಕ್ರಮ ನಿರೂಪಿಸಿದರು.