ಮಡಿಕೇರಿ, ಆ. 10: ಸಂತ್ರಸ್ತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಸಾಕಷ್ಟು ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇದ್ದು, ಪ್ಯಾನಲ್ ವಕೀಲರು ಹಾಗೂ ಮಧ್ಯಸ್ಥಿಕೆದಾರರು ಇಂತಹ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸಹಕರಿಸಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಕೋರಿದರು.

ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘ ವತಿಯಿಂದ ನಡೆದ ಸಂತ್ರಸ್ಥರಿಗೆ ಪರಿಹಾರ ಧನದ ಚೆಕ್ ವಿತರಣೆ ಹಾಗೂ ಕಾನೂನು ಶಿಬಿರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಂತ್ರಸ್ಥರು ಅರ್ಜಿಯನ್ನು ನೀಡಿದರೆ ಸಾಕ್ಷಿ ಆಧಾರವನ್ನು ಪರಿಶೀಲಿಸಿ ಪರಿಹಾರ ವಿತರಣೆ ಮಾಡಲಾಗುತ್ತದೆ. ಈ ಸಂಬಂಧ ಸಾಕಷ್ಟು ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇದ್ದು, ಈ ಬಗ್ಗೆ ಮಧ್ಯಸ್ಥಿಕೆ ಹಾಗೂ ಪ್ಯಾನಲ್ ವಕೀಲರು ಹೆಚ್ಚಿನ ಸಹಕಾರ ನೀಡುವಂತೆ ಮನವಿ ಮಾಡಿದರು.

ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ. ಪವನೇಶ್ ಮಾತನಾಡಿ, ಸಂತ್ರಸ್ಥರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾನೂನು ಸಮಿತಿ ಸದಸ್ಯರು ಸಹಕರಿಸಬೇಕು ಎಂದು ಅವರು ಕೋರಿದರು.

ಕಾನೂನು ಸೇವಾ ಪ್ರಾಧಿಕಾರದೊಂದಿಗೆ ಕೈಜೋಡಿಸಿದಾಗ ಹಲವು ಸಮಸ್ಯೆಗಳನ್ನು ಇತ್ಯರ್ಥಪಡಿಸಬಹುದಾಗಿದೆ. ಸಂತ್ರಸ್ಥರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದೆ ಹೋಗಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ಆದ ವಿಜಯಕುಮಾರ್, ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಕವನ್, ವಕೀಲರ ಸಂಘದ ಉಪಾಧ್ಯಕ್ಷ ಪ್ರೀತಂ, ಸರ್ಕಾರಿ ಅಭಿಯೋಜಕಿ ಕೃಷ್ಣವೇಣಿ ಇತರರು ಇದ್ದರು. ವಕೀಲ ಕೆ.ಡಿ. ದಯಾನಂದ ಸ್ವಾಗತಿಸಿದರೆ, ದಯಾ ಬಂಗೇರ ಪ್ರಾರ್ಥಿಸಿದರು. ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ ನಿರೂಪಿಸಿ, ವಂದಿಸಿದರು.