ಸೋಮವಾರಪೇಟೆ, ಆ. 15: ಭಯೋತ್ಪಾದನೆ ಮುಕ್ತ ಬಲಿಷ್ಠ ಭಾರತ ನಿರ್ಮಾಣಕ್ಕೆ ಯುವ ಜನಾಂಗ ಮುಂದಾಗಬೇಕು. ದೇಶದ ಹಿತದೃಷ್ಟಿಯಿಂದ ಇದು ಕರ್ತವ್ಯವೂ ಆಗಿದೆ ಎಂದು ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಹೇಳಿದರು.
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ 72ನೇ ಸ್ವಾತಂತ್ರೋತ್ಸವ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ವೈಜ್ಞಾನಿಕವಾಗಿ ನಮ್ಮ ದೇಶ ಪ್ರಗತಿಪಥದಲ್ಲಿ ಮುಂದುವರೆಯುತಿದ್ದರೂ ಸಮಾಜದಲ್ಲಿ ಇಂದಿಗೂ ಜೀವಂತವಿರುವ ಸಾಮಾಜಿಕ ಪಿಡುಗುಗಳು ಹಾಗೂ ಮೂಢನಂಬಿಕೆಗಳಿಂದ ಹಿನ್ನಡೆ ಉಂಟಾಗುತ್ತಿದೆ ಎಂದ ಅವರು, ದೇಶದಲ್ಲಿ ತಾಂಡವವಾಡುತ್ತಿರುವ ಭಯೋತ್ಪಾದನೆ, ಭ್ರ್ರಷ್ಟಾಚಾರ ನಿರ್ಮೂಲನೆ ಆಗಬೇಕಾದರೆ ಅದು ಯುವ ಸಮೂಹದಿಂದ ಮಾತ್ರ ಸಾಧ್ಯ ಎಂದರು.
ಧÀ್ವಜಾರೋಹಣವನ್ನು ನೆರವೇರಿಸಿದ ತಹಶೀಲ್ದಾರ್ ಪಿ.ಎಸ್.ಮಹೇಶ್ ಸ್ವಾತಂತ್ರೋತ್ಸವದ ಸಂದೇಶ ನೀಡಿ, ಸ್ವಾತಂತ್ರ್ಯೋತ್ಸವ ಆಚರಣೆ ಕೇವಲ ಕಾಟಾಚಾರಕ್ಕೆ ಆಗಬಾರದು. ಅದರಲ್ಲೂ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕೆಂದು ಕರೆ ನೀಡಿದರು.
ಇದೇ ಸಂದರ್ಭ ಮಾಜಿ ಸೈನಿಕರಾದ ಕಾಜೂರು ಗ್ರಾಮದ ಎಂ.ಎಸ್.ಕಾಳಪ್ಪ ಅವರನ್ನು ಸನ್ಮಾನಿಸಲಾಯಿತು. ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪ ಅವರು ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಸದಸ್ಯರಾದ ಹೆಚ್.ಎನ್.ತಂಗಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್.ನಾಗರಾಜಯ್ಯ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ.ವಿಜೇತ್, ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಸ್.ಮಹೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪೊಲೀಸ್, ಹೋಮ್ ಗಾಡ್ರ್ಸ್, ಸ್ಕೌಟ್ಸ್ ಮತ್ತು ಗೈಡ್ಸ್ ವೃಂದದವರಿಂದ ಗೌರವ ರಕ್ಷೆ ಸ್ವೀಕರಿಸಲಾಯಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಶಿಕ್ಷಕ ಹ್ಯೂಬರ್ಟ್ ಡಯಾಸ್ ಅವರು ಕಾರ್ಯಕ್ರಮ ನಿರ್ವಹಿಸಿದರು.
ಅರಣ್ಯ ಇಲಾಖೆ ವತಿಯಿಂದ ಹಸಿರು ಕರ್ನಾಟಕ ಆಂದೋಲನದ ಅಂಗವಾಗಿ ಚನ್ನಬಸಪ್ಪ ಸಭಾಂಗಣದ ಆವರಣದಲ್ಲಿ ವಲಯ ಅರಣ್ಯಾಧಿಕಾರಿ ಲಕ್ಷ್ಮಿಕಾಂತ್ ನೇತೃತ್ವದಲ್ಲಿ ಗಿಡಗಳನ್ನು ನೆಡಲಾಯಿತು.
‘ಕೋಮುವಾದ ಬಲಗೊಳ್ಳಲು ಬ್ರಿಟಿಷರ ಕಾಲಮಾನ ಕಾರಣ’
ವೀರಾಜಪೇಟೆ: ಭಾರತ ದೇಶದಲ್ಲಿ ಕೋಮುವಾದ ಬಲಗೊಳ್ಳಲು ಬ್ರಿಟಿಷರೇ ನಿರ್ಮಿಸಿದ ಕಾಲಮಾನವು ಒಂದು ಮುಖ್ಯ ಕಾರಣವಾಗಿದೆ. ಹಿಂದಿನ ಬ್ರಿಟಿಷ್ ಅಧಿಕಾರಿಗಳು ಹಿಂದು, ಮುಸ್ಲಿಂ, ಕ್ರ್ಯೆಸ್ತ ಪ್ರಾಚೀನ ಮಧ್ಯೆಯುಗೇನ ಆಧುನಿಕ ಕಾಲವೆಂದು ವಿಂಗಡಿಸಿ ಕೋಮು ವಾದಕ್ಕೆ ಪುಷ್ಟಿ ನೀಡಿದ್ದಾರೆ ಎಂದು ವೀರಾಜಪೇಟೆ ತಹಶೀಲ್ದಾರ್ ಗೋವಿಂದರಾಜ್ ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಾಲೂಕು ಮೈದಾನದಲ್ಲಿ ಹಮ್ಮಿಕೊಂಡಿದ್ದ 72ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ಹಾಗೂ ಧ್ವಜ ವಂದನೆ ಸ್ವೀಕರಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ದೊರಕಿದ ನಂತರ ಸಂವಿಧಾನ ಪ್ರಜಾತಂತ್ರದ ವ್ಯವಸ್ಥೆಗೆ ಚಾಲನೆ ನೀಡಿ ಇಂದು ಭಾರತ ಸರ್ವತೋಮುಖ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಹೇಳಿದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ತಾಲೂಕು ಪಂಚಾಯಿತಿ ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ಮಾತನಾಡಿ ದೇಶದ ಪ್ರತಿಯೊಬ್ಬ ನಾಗರಿಕ ಪ್ರಜೆಯು ತಮ್ಮ ದೇಶ ಪ್ರೇಮದೊಂದಿಗೆ ಸ್ವಾತಂತ್ರ್ಯವನ್ನು ಪ್ರಾಮಾಣಿಕತೆಯಿಂದ ಶಾಶ್ವತವಾಗಿ ಉಳಿಸಿಕೊಳ್ಳಬೇಕು ಎಂದರು.
ವೇದಿಕೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಮರಿಯಾ ಕ್ರಿಸ್ತ ರಾಜು, ಡಿವೈಎಸ್ಪಿ ನಾಗಪ್ಪ, ವೃತ್ತ ನಿರೀಕ್ಷಕ ಕುಮಾರ್ ಆರಾಧ್ಯ, ಮಾಜಿ ಸೈನಿಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಕಾವಾಡಿಚಂಡ ಗಣಪತಿ, ಪುಗ್ಗೇರ ನಂದಾ ಸುಬ್ಬಯ್ಯ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಹೇಮಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಮಾಜಿ ಸೈನಿಕರ ಸಹಕಾರ ಸಂಘದಿಂದ ಸೇನೆಯಲ್ಲಿ ಸೇವೆ ಸಲ್ಲಿಸಿದ ನಾಲ್ಕು ಮಂದಿಯನ್ನು ಸನ್ಮಾನಿಸಲಾಯಿತು.
ಉಪನ್ಯಾಸಕ ಚಾಲ್ರ್ಸ್ ಡಿಸೋಜಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಮಂಜುನಾಥ್ ವಂದಿಸಿದರು.
ಮಳೆಯ ಕಾರಣದಿಂದಾಗಿ ವಿವಿಧ ಶಾಲೆಗಳ ಸ್ಥಬ್ದಚಿತ್ರ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ಮೊಟಕುಗೊಂಡವು. ಪೋಲಿಸ್, ಸ್ಕೌಟ್ಸ್,ಗೈಡ್ಸ್, ವಿವಿಧ ಶಾಲಾ ಮಕ್ಕಳಿಂದ ಪಥ ಸಂಚಲನ ನಡೆಯಿತು.