ಸೋಮವಾರಪೇಟೆ, ಆ.20: ಭಾರೀ ಮಳೆಯಿಂದ ಸಂತ್ರಸ್ತರಾಗಿ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಸಂಸದ ಪ್ರತಾಪ್ ಸಿಂಹ ಸಾಂತ್ವನ ಹೇಳಿದ್ದು, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನೂತನ ಮನೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳುವದಾಗಿ ಭರವಸೆ ನೀಡಿದರು.
ಸೋಮವಾರಪೇಟೆಯ ಕೊಡವ ಸಮಾಜ, ಒಕ್ಕಲಿಗರ ಗೌಡ ಸಮಾಜ, ಐಗೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಿರಗಂದೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿದರು. ಸಂತ್ರಸ್ತರೊಂದಿಗೆ ಮಾತನಾಡಿ ಧೈರ್ಯ ತುಂಬಿದರು.
ಈ ಸಂದರ್ಭ ಸಂಸದರು ಮಾತನಾಡಿ, ತಕ್ಷಣವೆ ರಸ್ತೆಗೆ ಬಿದ್ದಿರುವ ಮಣ್ಣು, ಕಲ್ಲು ಬಂಡೆಗಳನ್ನು ತೆರವುಗೊಳಿಸುವ ಕಾರ್ಯ ಮಾಡಲಾಗುತ್ತದೆ ಎಂದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ದುರಂತದಿಂದ ಜೀವನ್ಮರಣಗಳ ಮಧ್ಯೆ ಸಿಲುಕಿದ್ದವರ ರಕ್ಷಣೆಗಾಗಿ ಭೂಸೇನೆಯ 174 ಮಂದಿ, ವಾಯು ಸೇನೆಯ 10 ಮಂದಿ, 30 ಮಂದಿ ಎನ್‍ಡಿಆರ್‍ಎಫ್ ಸಿಬ್ಬಂದಿಗಳು ಶ್ರಮಿಸುತ್ತಿದ್ದು, ಈಗಾಗಲೆ 661 ಮಂದಿಯನ್ನು ರಕ್ಷಿಸಿ, ಜಿಲ್ಲೆಯಲ್ಲಿ ತೆರೆದಿರುವ 36 ಗಂಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಗಂಜಿ ಕೇಂದ್ರಗಳಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲದಿರುವೆಡೆಗೆ ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿನ ಹವಾಮಾನ ವೈಪರೀತ್ಯದಿಂದಾಗಿ ಕೇಂದ್ರದಿಂದ ಬಂದ ಹೆಲಿಕಾಫ್ಟರ್ ಕಾರ್ಯನಿರ್ವಹಿಸಲಾಗದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ನಿಲುಗಡೆ ಮಾಡಲಾಗಿದೆ. ಈಗಾಗಲೇ ಜಿಲ್ಲೆಗೆ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಸಿ.ಟಿ. ರವಿಯವರುಗಳು ಭೇಟಿ ನೀಡಿದ್ದು, ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಕಷ್ಟ-ನಷ್ಟದ ಬಗ್ಗೆ ವರದಿ ಮಾಡುವಂತೆ ತಿಳಿಸಲಾಗಿದೆ ಎಂದರು.
ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ಡಿ. ಮಂಜುನಾಥ್, ಪ್ರಾ.ಕೃ.ಪ.ಸಹಕಾರ ಸಂಘದ ಉಪಾಧ್ಯಕ್ಷ ಕೆ.ಡಿ. ಸುರೇಶ್, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಸ್.ಪಿ. ಪೊನ್ನಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.