ಮಡಿಕೇರಿ, ಆ. 21: ಪ್ರಕೃತಿ ವಿಕೋಪದಿಂದ ಜಿಲ್ಲೆಯ ಜನರು ಸಂಕಷ್ಟಕ್ಕೆ ತುತ್ತಾಗಿದ್ದು, ಸಂತ್ರಸ್ಥರಿಗೆ ಸರ್ಕಾರ ನೆರವು ನೀಡುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ. ಆ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹತ್ತಿರದ ಜಿಲ್ಲೆಯ ವೈದ್ಯರು ಹಾಗೂ ಶುಶ್ರೂಷಕರನ್ನು ನಿಯೋಜಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ್ ಎಸ್. ಪಾಟೀಲ್ ಅವರು ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು; ಸುಮಾರು 170 ವೈದ್ಯರು, 50 ಶುಶ್ರೂಶಕರು 41 ಪರಿಹಾರ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸುಮಾರು 2 ಕೋಟಿ ರೂ ನೀಡಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

ಕೊಡಗು ಜಿಲ್ಲೆಯ ಸಂತ್ರಸ್ತರಿಗೆ ಹೆಚ್ಚಿನ ಸಹಾಯ ಮಾಡುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿದ್ದಾರೆ. ಜಿಲ್ಲೆಯಲ್ಲಿ ಸಾಕಷ್ಟು ವೈದ್ಯರ ಹುದ್ದೆಗಳು ಖಾಲಿ ಇದ್ದು, ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲಾಗುವದು. ಈಗಾಗಲೇ ಕೌನ್ಸಿಲಿಂಗ್ ಪ್ರಕ್ರಿಯೆ ನಡೆದಿದೆ ಎಂದು ಸಚಿವರು ಮಾಹಿತಿ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಆಹಾರ ಇಲಾಖೆಯ ಆಯುಕ್ತರಾದ ಪಂಕಜ್ ಕುಮಾರ್ ಪಾಂಡೆ ಅವರು ಸಂತ್ರಸ್ತರ ನೆರವಿಗಾಗಿ ಇಲಾಖೆ ವತಿಯಿಂದ ಅಡುಗೆ ಅನಿಲ ಇತರ ಸಾಮಗ್ರಿ ಪೂರೈಸಲಾಗುವದು ಎಂದು ತಿಳಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದ ಉನ್ನತ ಅಧಿಕಾರಿ ರತನ್ ಖೇಲ್ಕರ್ ಅವರು ಪರಿಹಾರ ಕೇಂದ್ರಗಳಲ್ಲಿ ವೈದ್ಯಕೀಯ ಸಂಬಂಧಿಸಿ ದಂತೆ 104 ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಎಂದು ಮಾಹಿತಿ ನೀಡಿದರು. ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಪಿ.ಐ ಶ್ರೀವಿದ್ಯಾ, ಪ್ರಶಾಂತ್ ಕುಮಾರ್ ಮಿಶ್ರ ಇತರರು ಇದ್ದರು.