ಮಡಿಕೇರಿ, ಆ.26: ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು, ಸಾವಿರಾರು ಕುಟುಂಬಗಳು ಸಂಕಷ್ಟ ಅನುಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಒಂದು ದಿನ ವೇತನ 102 ಕೋಟಿ ರೂ.ವನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ರಾಮು ತಿಳಿಸಿದ್ದಾರೆ.

ನಗರದ ಹೋಟೆಲ್‍ವೊಂದರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅಧ್ಯಕ್ಷರು ರಾಜ್ಯದಲ್ಲಿ 5.25 ಲಕ್ಷ ಸರ್ಕಾರಿ ನೌಕರಿದ್ದು, ಖಜಾನೆ ಮೂಲಕ ಒಂದು ದಿನದ ವೇತನ ಒಟ್ಟು 102 ಕೋಟಿ ರೂ ಕಟಾವಣೆಯಾಗಲಿದೆ ಎಂದು ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಷ್ಟ್ರ ಹಾಗೂ ರಾಜ್ಯಗಳಲ್ಲಿ ಸಂಭವಿಸುವ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಂತ್ರಸ್ತರಿಗೆ ನೆರವಿನ ಹಸ್ತ ನೀಡುತ್ತಾ ಬಂದಿದೆ. ಈ ಹಿಂದೆ ಕಾರ್ಗಿಲ್ ಯುದ್ಧ ಪರಿಹಾರ ನಿಧಿ, ಗುಜರಾತ್ ಭೂಕಂಪ ಸೇರಿದಂತೆ ಹಲವು ಸಂದರ್ಭಗಳಲ್ಲಿ ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನವನ್ನು ದೇಣಿಗೆಯಾಗಿ ನೀಡಿದೆ ಎಂದು ಅವರು ಸ್ಮರಿಸಿದರು.

ಪ್ರಸ್ತುತ ರಾಜ್ಯದ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಲಕ್ಷಾಂತರ ಜನರು ನಿರಾಶ್ರಿತರಾಗಿದ್ದು, ಸಂಕಷ್ಟಕ್ಕೆ ಸಿಲುಕಿ ಅಪಾರ ಪ್ರಮಾಣದ ಸಾವುನೋವು, ಆಸ್ತಿ ಪಾಸ್ತಿಗಳಿಗೆ ನಷ್ಟ ಸಂಭವಿಸಿರುವದು ಅತ್ಯಂತ ನೋವಿನ ಸಂಗತಿ. ಈ ಸನ್ನಿವೇಶದಲ್ಲಿ ಸಂತ್ರಸ್ತರಿಗೆ ಸಹಾಯ ಹಸ್ತ ನೀಡುವದು ನಮ್ಮೆಲ್ಲರ ಕರ್ತವ್ಯವಾಗಿರುತ್ತದೆ.

ಈ ಹಿನ್ನಲೆಯಲ್ಲಿ ತಾ. 20 ರಂದು ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು ಹಾಗೂ ಕೇಂದ್ರ ಸಂಘದ ಪದಾಧಿಕಾರಿ ಗಳ ತುರ್ತು ಕಾರ್ಯಕಾರಿ ಸಮಿತಿ ಸಭೆಯ ತಿರ್ಮಾನದಂತೆ ರಾಜ್ಯಾದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ನೌಕರರ ಒಂದು ದಿನದ ವೇತನ ಸುಮಾರು 102 ಕೋಟಿ ರೂಗಳನ್ನು ಜಿಲ್ಲೆಯ ನೆರೆ ಸಂತ್ರಸ್ತರ ಪುನರ್ವಸತಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುವದು ಎಂದು ಅವರು ಹೇಳಿದರು.

ಈ ಪರಿಹಾರ ನಿಧಿಯಿಂದ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡಲು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಲಾಗಿದೆ ಎಂದು ರಾಜ್ಯ ಅಧ್ಯಕ್ಷರು ಮಾಹಿತಿ ನೀಡಿದರು. ಜೋಡುಪಾಲ ಗ್ರಾಮದ ನಿವಾಸಿ ಹಾಗೂ ಸುಳ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ ಬಸಪ್ಪ ಅವರು ಅತಿವೃಷ್ಟಿಗೆ ಸಿಲುಕಿ ಮೃತರಾಗಿದ್ದು, ಅವರಿಗೆ ಇದೇ ಸಂದರ್ಭದಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು.

2006 ರಿಂದ ಜಾರಿಗೆ ಬಂದಿರುವ ಎನ್‍ಪಿಎಸ್ ರದ್ದುಪಡಿಸಿ ಹಳೇ ಪದ್ಧತಿಯನ್ನೇ ಮುಂದುವರೆಸ ಬೇಕು. ಆ ನಿಟ್ಟಿನಲ್ಲಿ ಮುಖ್ಯ ಮಂತ್ರಿಯವರಲ್ಲಿ ಕೋರಲಾಗಿದೆ. ಈ ಮನವಿಗೆ ಮುಖ್ಯಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರಾಮು ತಿಳಿಸಿದರು. ರಾಜ್ಯ ಸರ್ಕಾರಿ ನೌಕಕರ ಸಂಘದ ಕಾರ್ಯ ದರ್ಶಿ ಪುಟ್ಟಸ್ವಾಮಿ, ನಿರ್ದೇಶಕರಾದ ರಾಜಕುಮಾರ್, ಜಗದೀಶ, ಉಮೇಶ, ಗೋವಿಂದರಾಜು, ಶಿವರಾಮು, ಲಕ್ಷ್ಮಿಕಾಂತ್, ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷರಾದ ರವಿ ಇತರರು ಇದ್ದರು.