ಕೂಡಿಗೆ, ಸೆ. 16: ಕೇಂದ್ರ ಸರಕಾರದ ಉನ್ನತ ಮಟ್ಟದ ಅಧಿಕಾರಿಗಳ ತಂಡ ಕುಶಾಲನಗರದ ಗೊಂದಿಬಸವನಹಳ್ಳಿ ಗ್ರಾಮದ ರೊಂಡಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಮುಳ್ಳುಸೋಗೆ ಗ್ರಾ.ಪಂ. ವ್ಯಾಪ್ತಿಯ ಗೊಂದಿಬಸವನಹಳ್ಳಿ ಗ್ರಾಮದಲ್ಲಿರುವ ರೊಂಡಕೆರೆ ದಶಕಗಳ ಬಳಿಕ ತುಂಬಿ ಉಕ್ಕಿ ಹರಿದಿತ್ತು. ಇದೀಗ ಕೆರೆ ಕಟ್ಟೆಯ ಕೆಲವು ಭಾಗಗಳಲ್ಲಿ ಮೋಳೆ ಬಿದ್ದ ಪರಿಣಾಮ ನೀರು ಸೋರಿಕೆಯಾಗುತ್ತಿರುವ ಬಗ್ಗೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ತಂಡಕ್ಕೆ ಮಾಹಿತಿ ನೀಡಿದ್ದರು.
ಈ ನಿಟ್ಟಿನಲ್ಲಿ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಕೆರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿತು. ಈ ಸಂದರ್ಭ ತಂಡದ ಮುಖ್ಯಸ್ಥರಾದ ಕೇಂದ್ರ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಅನಿಲ್ ಮಲಿಕ್, ಕೇಂದ್ರ ಜಲ ಆಯೋಗದ ಅಧೀಕ್ಷಕ ಅಭಿಯಂತರ ಜಿತೇಂದರ್ ಪನ್ವರ್, ಕೇಂದ್ರ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಪೊನ್ನುಸ್ವಾಮಿ, ಕೊಡಗು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪಣ್ಣೇಕರ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಸಣ್ಣ ನೀರಾವರಿ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು, ಮುಳ್ಳುಸೋಗೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಇದ್ದರು.