ಮಡಿಕೇರಿ, ಸೆ. 27: ಪ್ರಕೃತಿ ವಿಕೋಪದಿಂದ ಹಾನಿಗೊಳಗಾಗಿರುವ ಪ್ರದೇಶದ ಎಲ್ಲಾ ವರ್ಗದ ಜನರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಪಶುಸಂಗೋಪನೆ ಇಲಾಖೆಯಿಂದ ವಿಶೇಷ ಕಾರ್ಯಕ್ರಮ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಪಶುಸಂಗೋಪನೆ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಉಪ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲಾ ಇಲಾಖೆಗಳು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯೊಳಗೆ ಯೋಜನೆಗಳನ್ನು ತಲಪಿಸಲು ಕಾರ್ಯ ಪ್ರವೃತ್ತರಾಗಬೇಕೆಂದರು.

ಅರಣ್ಯ ಇಲಾಖೆ ಅಧಿಕಾರಿಗಳಿಂದ ಯೋಜನೆ ಅನುಷ್ಠಾನದ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಈಗಾಗಲೇ ಜಾರಿಯಲ್ಲಿರುವ ಸೌರ ದೀಪ ವಿತರಣೆಗೆ ಪೂರಕವಾಗಿ ಪ್ರತಿ ಅರ್ಹ ಫಲಾನುಭವಿಗಳ ಮನೆಗಳಿಗೆ ಸೌರ ವಿದ್ಯುತ್ ಸಂಪರ್ಕ ನೀಡಲು ಪರಿಶೀಲಿಸುವಂತೆ ಸೂಚಿಸಿದರು.

ಮೀನುಗಾರಿಕೆ ಇಲಾಖೆ ವತಿಯಿಂದ ಮೀನು ಸಾಕಾಣಿಕೆಯ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅಕ್ಟೋಬರ್ ತಿಂಗಳ ಒಳಗೆ ಕಾರ್ಯ ಚಟುವಟಿಗೆ ಪ್ರಾರಂಭಿಸಲು ತಿಳಿಸಿದರು. ಕೈಗಾರಿಕಾ ಇಲಾಖಾ ಅಧಿಕಾರಿಗಳಿಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ವರ್ಗದ ಜನರಿಗೆ ವಿಶೇಷ ಜೀವನೋಪಾಯ ಕಾರ್ಯಕ್ರಮವನ್ನು ಆಯೋಜಿಸಿ ತರಬೇತಿ ನೀಡಿ ಯೋಜನೆಯನ್ನು ತ್ವರಿತವಾಗಿ ತಲುಪಿಸಬೇಕೆಂದು ಜಿಲ್ಲಾಧಿಕಾರಿ ಅವರು ತಾಕೀತು ಮಾಡಿದರು.

ಐಟಿಡಿಪಿ ಅಧಿಕಾರಿ ಶಿವಕುಮಾರ್ ಅವರು ಯೋಜನೆಯ ಅನುಷ್ಠಾನ ಕುರಿತು ಸಭೆಗೆ ಮಾಹಿತಿ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಯಾದೇವಿ ಗಲಗಲಿ ಇಲಾಖಾ ವತಿಯಿಂದ ಪ್ರಸಕ್ತ ವರ್ಷದ ಕಾರ್ಯಕ್ರಮಗಳು ಹಾಗೂ ಪ್ರಗತಿಯ ವಿವರಗಳನ್ನು ಸಭೆಗೆ ನೀಡಿದರು.

ನಗರಾಭಿವೃದ್ಧಿ ಇಲಾಖಾ ವತಿಯಿಂದ ಕೈಗೊಂಡಿರುವ ಕಾರ್ಯಕ್ರಮಗಳು ಹಾಗೂ ಪ್ರಗತಿ ಸಂಬಂಧಿಸಿದಂತೆ ತೀವ್ರ ಅಸಮದಾನ ವ್ಯಕ್ತಪಡಿಸಿದ ಜಿ.ಪಂ. ಸಿಇಓ ಪ್ರಶಾಂತ್ ಕುಮಾರ್ ಮಿಶ್ರ ಈ ಸಂಬಂಧ ಐಟಿಡಿಪಿ ಇಲಾಖಾ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಶೇ. 24.1 ಮತ್ತು ಶೇ. 17.15 ಕಾರ್ಯಕ್ರಮಗಳಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಪ್ರಗತಿ ಸಾಧಿಸುವಂತೆ ಸೂಚಿಸಿದರು.

ವಿವಿಧ ಇಲಾಖೆಯ ಅಧಿಕಾರಿಗಳು ಸಂಬಂಧಪಟ್ಟ ಯೋಜನೆಯ ಪ್ರಗತಿ ಕುರಿತು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವಾಲ್ಟರ್ ಡಿಮೆಲ್ಲೋ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೀಡಿರುವ ಸವಲತ್ತುಗಳ ಕುರಿತು ಸಭೆಗೆ ತಿಳಿಸಿದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಇತರರು ಇದ್ದರು.