ಮಡಿಕೇರಿ, ಸೆ. 29: ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವತಿಯಿಂದ ಮೇಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಕುಸುಮಾವತಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಶಾಲಾ ವ್ಯಾಪ್ತಿಗೆ ಇಂತಹ ಉಚಿತ ದಂತ ತಪಾಸಣಾ ಶಿಬಿರಗಳು ಉಪಯುಕ್ತವಾಗಿದೆ. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವತಿಯಿಂದ ಈ ಶಾಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿರುವದು ಸಂತಸ ತಂದಿದೆ ಎಂದರು.

ಶಿಬಿರದಲ್ಲಿ ಭಾಗವಹಿಸಿದ್ದ ವೀರಾಜಪೇಟೆ ದಂತ ಚಿಕಿತ್ಸಕಿ ಡಾ. ಪ್ರಿಯಾಂಕ ಮಾತನಾಡಿ, ದಂತ ಸುರಕ್ಷತೆ ಹಾಗೂ ಸ್ವಚ್ಛತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಇದೇ ಸಂದರ್ಭ ತಜ್ಞರಿಂದ ದಂತ ರೋಗಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯಿತು.

ಶಾಲೆಯ ವಿದ್ಯಾರ್ಥಿಗಳು ಹಾಗೂ ಗ್ರಾಮದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಬಿ.ಎಂ. ಜ್ಞಾನೇಶ್ವರಿ, ಎಂ.ಬಿ. ಟೀನಾ, ಬಿ.ಎಸ್. ಮಿಕಿತಾ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.