ಮಡಿಕೇರಿ, ಸೆ. 30: ಕಾನೂನಿನ ಅರಿವು ಮತ್ತು ನೆರವು ಪ್ರತಿಯೊಬ್ಬರಿಗೂ ತಲಪಿದಾಗ ಸಮಾಜದಲ್ಲಿ ಸಮಾನತೆ, ಸಹಬಾಳ್ವೆ, ಸಹೋದರತ್ವ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಬಡವರು, ದುರ್ಬಲರು, ಮಹಿಳೆಯರು ಮತ್ತು ಮಕ್ಕಳು ಹೀಗೆ ಎಲ್ಲರಿಗೂ ಕಾನೂನಿನ ಅರಿವು ಮತ್ತು ನೆರವು ಪಡೆಯುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ತಿಳಿಸಿದ್ದಾರೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘ ಇವರ ಜಂಟಿ ಆಶ್ರಯದಲ್ಲಿ ನಗರದ ನ್ಯಾಯಾಲಯ ಆವರಣದಲ್ಲಿ ನಡೆದ ‘ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಮತ್ತು ಗುರುತಿನ ಚೀಟಿ ವಿತರಣಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಕವನ್ ಮಾತನಾಡಿ, ಕಾನೂನು ನಿಂತ ನೀರಲ್ಲ, ದಿನದಿಂದ ದಿನಕ್ಕೆ ಕಾನೂನು ಬದಲಾಗುತ್ತಿರುತ್ತದೆ. ಆದ್ದರಿಂದ ಕಾನೂನಿನ ಬಗ್ಗೆ ಅರಿವು ಇರಬೇಕು ಎಂದರು.

ಈ ಸಂದರ್ಭ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿಯನ್ನು ವಿತರಿಸಲಾಯಿತು. ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಡಿ. ಪವನೇಶ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ವಿಜಯ ಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಬಿ.ಕೆ. ಮನು ವಕೀಲರಾದ ಪಿ.ಯು. ಪ್ರೀತಂ, ಕೆ.ಎಂ. ಮೀನಕುಮಾರಿ, ಎಂ.ಎ. ನಿರಂಜನ್ ಇತರರು ಇದ್ದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಬಿ.ಎಸ್.ಜಯಪ್ಪ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.