ಕುಶಾಲನಗರ, ಅ. 8: ಕುಶಾಲನಗರದ ಗುಂಡೂರಾವ್ ಬಡಾವಣೆಯಲ್ಲಿ ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮೂಲಭೂತ ಸೌಲಭ್ಯ ಕಲ್ಪಿಸುವ ಯೋಜನೆಯ ಕೆಲಸ ಪ್ರಾರಂಭಗೊಂಡಿದ್ದು, ಕಾಮಗಾರಿ ಸಮರ್ಪಕವಾಗಿ ನಡೆಯುತ್ತಿಲ್ಲ ಎನ್ನುವ ದೂರುಗಳು ಕೇಳಿಬಂದಿವೆ. ಬಡಾವಣೆಯ ಕೆಲವು ನಿವೇಶನಗಳನ್ನು ಹರಾಜು ಮಾಡಿದ ಐಡಿಎಸ್‍ಎಂಟಿ ಪ್ರಸಕ್ತ ಅಂದಾಜು 7 ಕೋಟಿ ರೂ.ಗಳ ಕಾಮಗಾರಿ ಕೈಗೆತ್ತಿಕೊಂಡಿದ್ದು ಮೂಲಭೂತ ಸೌಲಭ್ಯಗಳಾದ ಚರಂಡಿ, ರಸ್ತೆ, ಉದ್ಯಾನವನ, ಬೀದಿ ದೀಪ ಮತ್ತು ಬಡಾವಣೆಯ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದೆ.
ಕಳೆದ ಕೆಲವು ದಿನಗಳಿಂದ ಕಾಮಗಾರಿ ನಡೆಯುತ್ತಿದ್ದು, ಗುಣಮಟ್ಟ ಪರಿಶೀಲನೆಗೆ ಸಂಬಂಧಿಸಿದಂತೆ ತಾಂತ್ರಿಕ ಅಧಿಕಾರಿಗಳು ಸ್ಥಳದಲ್ಲಿ ಇರುವದಿಲ್ಲ ಎನ್ನುವ ಆರೋಪಗಳು ಕೇಳಿಬಂದಿವೆ. ಗುಂಡೂರಾವ್ ಬಡಾವಣೆಯಲ್ಲಿ ಒಳಚರಂಡಿ ವ್ಯವಸ್ಥೆಯ ಕೆಲಸ ಅಪೂರ್ಣಗೊಂಡಿದ್ದು, ಉಳಿದ ಕಾಮಗಾರಿ ಬಾಕಿಯಿದ್ದರೂ ರಸ್ತೆ ಕೆಲಸ, ಚರಂಡಿ ಕಾಮಗಾರಿ ನಡೆಯುತ್ತಿದೆ. ಒಳಚರಂಡಿ ಕಾಮಗಾರಿಗಾಗಿ ರಸ್ತೆಯನ್ನು ಅಗೆಯುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದ ರಸ್ತೆಯ ಗುಣಮಟ್ಟ ಕುಸಿಯಲೂ ಕಾರಣವಾಗುತ್ತದೆ. ಈ ಹಿನ್ನೆಲೆ ಮನೆಗಳಿಂದ ಒಳಚರಂಡಿ ವ್ಯವಸ್ಥೆಗೆ ಸಂಪರ್ಕ ಕಲ್ಪಿಸಿದ ನಂತರ ರಸ್ತೆ ಕಾಮಗಾರಿ ನಡೆಸುವಂತೆ ಸ್ಥಳೀಯ ಪ್ರಮುಖರಾದ ಮಂಜುನಾಥ್ ಗುಂಡೂರಾವ್ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ಅಂದಾಜು ರೂ. 1.75 ಕೋಟಿ ವೆಚ್ಚದಲ್ಲಿ ಚರಂಡಿ ನಿರ್ಮಾಣ, ರೂ. 3.5 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ಹಾಗೂ ರೂ. 2 ಕೋಟಿ ವೆಚ್ಚದಲ್ಲಿ ಉದ್ಯಾನವನ ಮತ್ತಿತರ ಸೌಕರ್ಯ ಕಲ್ಪಿಸಲಾಗುತ್ತಿದ್ದು, ಅಂದಾಜು ಪಟ್ಟಿಯಂತೆ ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಮಾಜಿ ಸದಸ್ಯರುಗಳಾದ ಪ್ರಮೋದ್ ಮುತ್ತಪ್ಪ, ಜೋಸೆಫ್ ವಿಕ್ಟರ್ ಸೋನ್ಸ್ ಒತ್ತಾಯಿಸಿದ್ದಾರೆ. ಪ್ರಸಕ್ತ ಪಂಚಾಯಿತಿ ಆಡಳಿತ ಮಂಡಳಿ ಇಲ್ಲದಿರುವ ಹಿನ್ನಲೆ ಜಿಲ್ಲಾಧಿಕಾರಿಗಳು ಹಾಗೂ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕಾಮಗಾರಿ ಬಗ್ಗೆ ಗಮನಹರಿಸಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.