ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಯುವ ಸ್ಪಂದನ ವತಿಯಿಂದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯು ಬೆಳಿಗ್ಗೆ 11 ಗಂಟೆಗೆ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ವೀರಪ್ಪ ವೀರಭದ್ರಪ್ಪ ಮಲ್ಲಾಪುರ, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಶಿವಕುಮಾರ್, ವಕೀಲರ ಸಂಘದ ಅಧ್ಯಕ್ಷರಾಧ ಕೆ.ಎಸ್.ಕವನ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನಿಸ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮಹೇಶ್ ಕೆ.ಕೆ ಇತರರು ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 9.30 ಗಂಟೆಗೆ ನಗರದ ಕೋಟೆ ಆವರಣದಲ್ಲಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.
ಕರಗ ಉತ್ಸವಕ್ಕೆ ಚಾಲನೆ
ನಗರದ ಇತಿಹಾಸ ಪ್ರಸಿದ್ದ 4 ಶಕ್ತಿ ದೇವತೆಗಳ ಕರಗಗಳನ್ನು ಸಂಜೆ 5 ಗಂಟೆಗೆ ಮಹದೇವಪೇಟೆಯ ಪಂಪಿನಕೆರೆ ಬಳಿ ನಗರ ದಸರಾ ಸಮಿತಿ ವತಿಯಿಂದ ಸಾಂಪ್ರದಾಯಿಕ ಪೂಜೆ ಅರ್ಪಿಸಿ ನಗರ ಪ್ರದಕ್ಷಿಣೆಗೆ ಕರಗಗಳನ್ನು ಬರಮಾಡಿಕೊಳ್ಳಲಾಗುವದು ಎಂದು ನಗರ ದಸರಾ ಸಮಿತಿ ಹಾಗೂ ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಅವರು ತಿಳಿಸಿದ್ದಾರೆ.
ಸಾರ್ವಜನಿಕ ಸಂಪರ್ಕ ಸಭೆ
ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ, ಭಾರತ ಸರ್ಕಾರದ ಅನುಮೋದನೆಗೆ ಅನುಗುಣವಾಗಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮೈಸೂರಿನಿಂದ ಮಡಿಕೇರಿಯವರೆಗೆ ಪ್ರಸ್ತಾವಿತ 4 ಪಥಗಳ ಹೆದ್ದಾರಿ ನಿರ್ಮಾಣಕ್ಕಾಗಿ ಸಾರ್ವಜನಿಕರ ತಿಳುವಳಿಕೆ ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸಲು ಕೊಡಗು ಜಿಲ್ಲೆಯ ಜಿಲ್ಲಾಡಳಿತದ ಮುಂದಾಳತ್ವದೊಂದಿಗೆ ಕುಶಾಲನಗರದ ರೈತ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಸಾರ್ವಜನಿಕ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ.
ಮೈಸೂರು ಜಿಲ್ಲೆಯ ಸಾರ್ವಜನಿಕರು ಹಿಂದೆ ಮೈಸೂರಿನಲ್ಲಿ ನಡೆದ ಸಭೆಯನ್ನು ತಪ್ಪಿದ್ದಲ್ಲಿ ಅವರು ಕೂಡ ಕೊಡಗು ಜಿಲ್ಲೆಯ ಸಾರ್ವಜನಿಕರ ಜೊತೆಗೂಡಿ ಈ ಸಭೆಯಲ್ಲಿ ಭಾಗವಹಿಸಬಹುದು ಮತ್ತು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ಸಲ್ಲಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಧಾನ ವ್ಯವಸ್ಥಾಪಕರು, ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.